ಕೈಗಾರಿಕಾ ಬೆಳವಣಿಗೆ ವಿಕೇಂದ್ರೀಕರಣ ಅಭಿವೃದ್ಧಿಗೆ ಪೂರಕ: ಸಚಿವ ಜಗದೀಶ್ ಶೆಟ್ಟರ್

Update: 2020-02-28 12:49 GMT

ಬೆಳಗಾವಿ, ಫೆ.28: ಕೈಗಾರಿಕಾ ಬೆಳವಣಿಗೆ ವಿಕೇಂದ್ರೀಕರಣ ಮಾಡುವ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮಾಡಲಾಗುತ್ತಿದೆ. ಇದರೊಂದಿಗೆ ಎಲ್ಲರಿಗೂ ಉದ್ಯೋಗ ನೀಡುವುದು ನಮ್ಮ ಆಶಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಶುಕ್ರವಾರ ನಗರದ ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೆಳಗಾವಿ ಹಾಗೂ ಧಾರವಾಡ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಶ್ರಯದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಪ್ರಾದೇಶಿಕ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೇಂದ್ರ ಸರಕಾರದ ನೆರವಿನೊಂದಿಗೆ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದೆ. ಇಂತಹ ಮೇಳಗಳ ಮೂಲಕ ಅರ್ಹ ವಿದ್ಯಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗ ಒದಗಿಸುವ ಮಹತ್ವಾಕಾಂಕ್ಷಿ ಉದ್ಧೇಶವನ್ನು ಸರಕಾರ ಹೊಂದಿದೆ ಎಂದು ಅವರು ಹೇಳಿದರು. ಮೇಳದಲ್ಲಿ ಭಾಗವಹಿಸಿರುವ 162 ಕಂಪನಿಗಳಲ್ಲಿ 9500 ಉದ್ಯೋಗ ಒದಗಿಸಲು ಅವಕಾಶಗಳಿದ್ದು, ಅಭ್ಯರ್ಥಿಗಳು ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕೈಗಾರಿಕೆ ಬೆಳವಣಿಗೆ ಜತೆಗೆ ಉದ್ಯೋಗಾವಕಾಶಗಳು ಹೆಚ್ಚಾಗಬೇಕು. ಸ್ಥಳೀಯರಿಗೆ ಉದ್ಯೋಗ ದೊರಕಿಸಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಂಗಳೂರು ಕೇಂದ್ರೀಕೃತವಾಗಿದ್ದ ಉದ್ದಿಮೆಗಳನ್ನು ರಾಜ್ಯದ ಎರಡು ಮತ್ತು ಮೂರನೆ ಹಂತದ ನಗರಗಳಿಗೆ ಕೊಂಡೊಯ್ಯಲು ನೂತನ ಕೈಗಾರಿಕಾ ನೀತಿಯಲ್ಲಿ ಉತ್ತೇಜನ ನೀಡಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟಾರೆ 72 ಸಾವಿರ ಕೋಟಿ ರೂ.ಹೂಡಿಕೆಗೆ ಕಂಪೆನಿಗಳು ಒಪ್ಪಂದ ಮಾಡಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಆದಷ್ಟು ಬೇಗ ಜಮೀನು ನೀಡಲಾಗುವುದು ಎಂದು ಅವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೊರಗು ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದಲ್ಲಿ ನಿವಾರಣೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಪ್ರತ್ಯೇಕವಾಗಿ ಆರಂಭಿಸುವ ಮೂಲಕ ಉದ್ಯೋಕಾಂಕ್ಷಿಗಳಿಗೆ ಅಗತ್ಯ ತರಬೇತಿ ನೀಡುವ ಮೂಲಕ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕ್ರಮಕೈಗೊಂಡಿವೆ ಎಂದು ಅವರು ಹೇಳಿದರು.

ಗ್ರಾಮೀಣ ಮತ್ತು ನಗರಪ್ರದೇಶದ ಎಲ್ಲ ಯುವಕ-ಯುವತಿಯರು ಉದ್ಯೋಗಮೇಳದ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು. ಉತ್ತರ ಕರ್ನಾಟಕದ ಪ್ರಗತಿಗೆ ಎಲ್ಲ ಜನಪ್ರತಿನಿಧಿಗಳು ಕಟಿಬದ್ಧರಾಗಿದ್ದಾರೆ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News