ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರರು ಕಪ್ಪುಪಟ್ಟಿಗೆ: ಸಚಿವ ಎಸ್.ಟಿ.ಸೋಮಶೇಖರ್

Update: 2020-03-02 14:37 GMT

ಬೆಂಗಳೂರು, ಮಾ.3: ಇಲ್ಲಿನ ಉಲ್ಲಾಳು ವಾರ್ಡ್ ವ್ಯಾಪ್ತಿಯಲ್ಲಿ 450 ಮನೆಗಳ ಕಾಮಗಾರಿ ವಿಳಂಬಕ್ಕೆ ಕಾರಣರಾಗಿರುವ ಗುತ್ತೆಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಉಲ್ಲಾಳು ಉಪನಗರದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ, 160 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಜ್ಞಾನಭಾರತಿ ಎರಡನೇ ಹಂತದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಕೆಂಚನಪುರ ಕ್ರಾಸ್, ಗೊಲ್ಲರಹಟ್ಟಿಯಲ್ಲಿ ಯೋಗಕೇಂದ್ರ ಪ್ರಾರಂಭೋತ್ಸವ, ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ಆರು ಕೋಟಿ ರೂ.ವೆಚ್ಚದಲ್ಲಿ ವಿವಿಧ ಬಡಾವಣೆಯಲ್ಲಿ ಕೈಗೊಂಡಿರುವ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಉಲ್ಲಾಳು ವಾರ್ಡ್ ವ್ಯಾಪ್ತಿಯಲ್ಲಿ 450 ಮನೆಗಳ ಕಾಮಗಾರಿ ವಿಳಂಬವಾಗಿದೆ. ಈಗ ಮತ್ತೊಬ್ಬ ಗುತ್ತಿಗೆದಾರರಿಗೆ ಮನೆ ನಿರ್ಮಿಸಿಕೊಡುವಂತಹ ವ್ಯವಸ್ಥೆ ಮಾಡಲಾಗಿದೆ. ಮುಂದಿನ ಐದು ತಿಂಗಳ ಒಳಗೆ ಸುಸಜ್ಜಿತ ಮನೆ ನಿರ್ಮಾಣ ಮಾಡಿಕೊಡುವ ಜವಾಬ್ದಾರಿ ನನ್ನದು ಎಂದು ಅವರು ಭರವಸೆ ನೀಡಿದರು.

ಬೆಂಗಳೂರು ಒಳಗೆ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ ನಾಗರಿಕರಿಗೆ ಹಕ್ಕುಪತ್ರ ನೀಡುವಂತಿರಲಿಲ್ಲ. ಆದರೆ, ಕಾಗೋಡು ತಿಮ್ಮಪ್ಪ ಕಂದಾಯ ಸಚಿವರಾಗಿದ್ದ ಅವಧಿಯಲ್ಲಿ ಈ ನಿಯಮವನ್ನು ಬದಲಿಸಿದ್ದಾರೆ. ಹೀಗಾಗಿ ಸಾವಿರಾರು ಜನರಿಗೆ ಹಕ್ಕುಪತ್ರ ದೊರಕಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.

ಈ ವೇಳೆ ಸ್ಥಳೀಯ ಪಾಲಿಕೆ ಸದಸ್ಯೆ ಶಾರದಾ ಮುನಿರಾಜು, ರಾಜಣ್ಣ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಅನಿಲ್ ಕುಮಾರ್, ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಅಧ್ಯಕ್ಷ ಮಂಗನಹಳ್ಳಿ ಎಂ.ನಾಗರಾಜು, ಉದ್ಯಮಿ ರಾಜೇಶ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News