ರಾಜ್ಯದಲ್ಲಿ ಇದುವರೆಗೂ ಕೊರೋನ ವೈರಸ್ ಪತ್ತೆಯಾಗಿಲ್ಲ: ಸಚಿವ ಡಾ.ಸುಧಾಕರ್ ಸ್ಪಷ್ಟನೆ
ಬೆಂಗಳೂರು, ಮಾ. 4: ಮಾರಣಾಂತಿಕವಾಗಿ ಸೃಷ್ಟಿಯಾಗಿರುವ ಕೋವಿಡ್ 19(ಕೊರೋನ) ಸೋಂಕು ರಾಜ್ಯದಲ್ಲಿ ಇದುವರೆಗೂ ಎಲ್ಲಿಯೂ ಪತ್ತೆಯಾಗಿಲ್ಲ. ಹೀಗಾಗಿ, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಬುಧವಾರ ವಿಧಾನಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಪ್ರಸ್ತಾಪಿಸಿದ ವಿಷಯದ ಮೇಲೆ ಮಾತನಾಡಿದ ಅವರು, ಕೊರೋನ ವೈರಸ್ ವಿರುದ್ಧ ಸರಕಾರ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 50 ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡುವ ಸಂಬಂಧ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಗೆ ಸೂಕ್ತವಾದ ತರಬೇತಿಯನ್ನು ನೀಡಲಾಗಿದೆ. ಕೇಂದ್ರ ಸರಕಾರದ ಮಾರ್ಗದರ್ಶನದ ಪ್ರಕಾರವೇ ನಾವು ಚಿಕಿತ್ಸೆಯನ್ನು ನೀಡಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಮತ್ತು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ ವಿವಿಧ ವಿಮಾನ ನಿಲ್ದಾಣಗಳಲ್ಲಿ 39,391 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ಬಸ್, ರೈಲು ನಿಲ್ದಾಣಗಳು, ಬಂದರಿನಲ್ಲೂ ವಿದೇಶದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಕೊರೋನ ವೈರಸ್ ಬಂದವರನ್ನು 14 ದಿನಗಳ ಕಾಲ ಸೂಕ್ತ ನಿಗಾದಲ್ಲಿಡಬೇಕು ಎಂದಿದೆ. ಆದರೆ, ನಾವು ಮತ್ತಷ್ಟು ಜಾಗೃತೆ ವಹಿಸಿದ್ದು, 28 ದಿನಗಳ ಕಾಲ ಚಿಕಿತ್ಸೆ ಹಾಗೂ ವಿಶೇಷ ನಿಗಾ ವಹಿಸಲಾಗುತ್ತಿದೆ. ರಾಜ್ಯದಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಉನ್ನತ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶು ಮತ್ತು ಸಂಗೋಪನೆ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ.
ಅಲ್ಲದೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ 104 ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದೇವೆ. ಎಲ್ಲೇ ಕಂಡು ಬಂದರು ಸಾರ್ವಜನಿಕರು ಈ ಸಹಾಯವಾಣಿಗೆ ಕರೆ ಮಾಡಬಹುದು. ಅಲ್ಲದೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಹಾರ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಪ್ರತಿ ದಿನ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.