ಮಹಿಳಾ ಉದ್ಯಮಿಗಳಿಗೆ ಕಡಿಮೆ ದರದಲ್ಲಿ ಭೂಮಿ: ಸಿಎಂ ಯಡಿಯೂರಪ್ಪ
ಬೆಂಗಳೂರು, ಮಾ.5: ಮಹಿಳೆಯರು ಉದ್ಯಮ ಪ್ರಾರಂಭಿಸಲು ಅನುಕೂಲವಾಗುವಂತೆ ಕಡಿಮೆ ದರದಲ್ಲಿ ಭೂಮಿ ನೀಡುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ, ಉದ್ಯಮ ಸಂಪರ್ಕ-2020 ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಉದ್ಯಮ ಪ್ರಾರಂಭಿಸಲು ಮುಂದೆ ಬಂದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ಸರಕಾರದ ಯೋಜನೆಗಳ ಪ್ರಯೋಜನ ಪಡೆಯಲು ಮಹಿಳಾ ಸಮುದಾಯ ಮುಂದೆ ಬಂದು ಸ್ವಾವಲಂಬಿಗಳಾಗಬೇಕು. ಮಹಿಳಾ ಉದ್ಯಮಿಗಳು ಚರ್ಚೆ ಮಾಡಿ ಕೈಗೊಳ್ಳುವ ತೀರ್ಮಾನಗಳನ್ನು ಜಾರಿಗೆ ತರಲು ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಅವರು ಭರವಸೆ ನೀಡಿದರು.
ಮಹಿಳಾ ಅಭಿವೃದ್ಧಿ ಮತ್ತು ಸಬಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಪಾತ್ರ ಹೆಚ್ಚಾಗಿದೆ. ದೇಶದ ಆರ್ಥಿಕತೆಗೆ ಮಹಿಳಾ ಉದ್ಯಮಿಗಳು ಕೊಡುಗೆ ನೀಡಿದ್ದಾರೆ. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.
ಸ್ವಸಹಾಯ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ನಿನ್ನೆ ಮಂಡಿಸಿದ ಬಜೆಟ್‌ನಲ್ಲಿ ಉದ್ಯಮಿಗಳಿಗೆ ಮೀಸಲಿಟ್ಟಿರುವ ಅನುದಾನ ಹೆಚ್ಚಳ ಮಾಡಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಹಣಕಾಸಿನ ನೆರವು ನೀಡಲು ಸರಕಾರ ಬದ್ಧವಾಗಿದೆ. ಅತ್ಯಾಧುನಿಕ ಮಹಿಳಾ ಪಾರ್ಕ್‌ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗುವುದು ಎಂದು ಅವರು ಹೇಳಿದರು.
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಮಾತನಾಡಿ, ರಾಜ್ಯದ ಮಹಿಳಾ ಉದ್ಯಮಿಗಳ ಒಕ್ಕೂಟದ ಎಲ್ಲ ರೀತಿಯ ಕೆಲಸ ಕಾರ್ಯಗಳನ್ನು ಡಿಜಿಟಲ್ ವೇದಿಕೆಯಡಿ ತರುವುದಕ್ಕೆ ಐಟಿಬಿಟಿ ಇಲಾಖೆಯಿಂದ ಸಂಪೂರ್ಣವಾಗಿ ನೆರವು ನೀಡಲಾಗುವುದೆಂದು ಭರವಸೆ ನೀಡಿದರು.
ಮಹಿಳಾ ಉದ್ಯಮಿಗಳ ಒಕ್ಕೂಟ ವಿಶ್ವ ಮಹಿಳಾ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದೆ. ಈ ಒಕ್ಕೂಟಕ್ಕೆ ಎಲ್ಲ ರೀತಿಯ ಸಹಕಾರ ಕೊಟ್ಟು, ಶಕ್ತಿ ತುಂಬಲು ನಮ್ಮ ಸರಕಾರ ಸಿದ್ಧವೆಂದು ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಯುಬಿಯುಎನ್‌ಟಿಯು ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಉಪಸ್ಥಿತರಿದ್ದರು.