ಕೊರೋನ ವೈರಸ್ ಭೀತಿ: ರಾಜ್ಯದ ಎಲ್ಲ ಶಾಲೆಗಳಿಗೆ ರಜೆ ಘೋಷಿಸುವಂತೆ ತನ್ವೀರ್ ಸೇಠ್ ಪತ್ರ

Update: 2020-03-07 14:58 GMT

ಬೆಂಗಳೂರು, ಮಾ.7: ವಿಶ್ವದ ವಿವಿಧ ದೇಶಗಳಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಪಸರಿಸುತ್ತಿರುವ ಕೊರೋನ ವೈರಸ್‌ನಿಂದ ಉಂಟಾಗಬಹುದಾದ ಅಪಾಯಗಳನ್ನು ಎದುರಿಸಲು ಮುನ್ನೆಚ್ಚರಿಕೆಯ ಹಾಗೂ ಶಾಲಾ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರಕಾರವು ತಕ್ಷಣವೆ ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್‌ಗೆ ಪತ್ರ ಬರೆದಿರುವ ಅವರು, ರಾಜ್ಯದ ಎಲ್ಲ ಸರಕಾರಿ, ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 9ನೆ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಿಗೆ ಕೂಡಲೆ ರಜೆಯನ್ನು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಶೈಕ್ಷಣಿಕ ವರ್ಷವು ಮುಕ್ತಾಯದ ಹಂತದಲ್ಲಿರುವುದರಿಂದ ಬಹುತೇಕ ಶಾಲೆಗಳಲ್ಲಿ ಪಾಠ ಪ್ರವಚನಗಳು ಪೂರ್ಣಗೊಂಡಿದ್ದು, ಪುನರಧ್ಯಯನ ಕಾರ್ಯವು ಸಾಗಿರುವುದರಿಂದ ಈ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಪಾಠ ಪ್ರವಚನಗಳಿಂದ ವಂಚಿತರಾಗುವುದಿಲ್ಲ ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ.

ಪರೀಕ್ಷಾ ಸಮಯದಲ್ಲಿ ಶಾಲೆ ನಡೆಯುವ ದಿನಗಳಂದು ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ನೀಡಬೇಕು ಎಂದು ಅವರು ಕೋರಿದ್ದಾರೆ.

ಕೊರೋನ ವೈರಸ್ ಕುರಿತಂತೆ ಈಗಾಗಲೆ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಅರಿವು ಮೂಡಿಸುವ ಬಗ್ಗೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಈ ಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದೆ ಇರುವುದನ್ನು ಗಮನಿಸಬಹುದಾಗಿದೆ. ಈ ಬಗ್ಗೆ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಶಾಲಾ ವಿದ್ಯಾರ್ಥಿಗಳು ತಮ್ಮ ಸಹಜ ಮುಗ್ಧತೆಯಿಂದ ಸ್ವಾಭಾವಿಕವಾಗಿ ಶಾಲಾ ಸಮಯದಲ್ಲಿ ಈ ಕ್ರಮಗಳನ್ನು ಪಾಲಿಸುತ್ತಿರುವ ಬಗ್ಗೆ ಮೇಲ್ವಿಚಾರಣೆ ನಡೆಸುವುದು ಕಷ್ಟ ಸಾಧ್ಯ ಎಂದು ತನ್ವೀರ್ ಸೇಠ್ ಅಭಿಪ್ರಾಯಪಟ್ಟಿದ್ದಾರೆ.

ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸಹಜವಾಗಿ ಬೆರೆಯುವುದು, ಆಟೋಟಗಳಲ್ಲಿ ಭಾಗವಹಿಸುವುದು, ಶೌಚಾಲಯ, ಕುಡಿಯುವ ನೀರು ಇವುಗಳನ್ನು ಮುಕ್ತವಾಗಿ ಉಪಯೋಗಿಸುವುದನ್ನು ತಡೆಯಲಾಗದು. ಯಾವುದೇ ಒಬ್ಬ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕಾಗಿ ಸಾಮಾನ್ಯ ಶೀತ, ಜ್ವರ ಅಥವಾ ಫ್ಲೂ ನಂತಹ ಬಾಧೆಗೆ ಒಳಗಾದರೂ ಎಲ್ಲ ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಅನಾವಶ್ಯಕ ಆತಂಕ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News