×
Ad

1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.23ರೊಳಗೆ ಪರೀಕ್ಷೆ ಪೂರ್ಣಗೊಳಿಸಲು ಇಲಾಖೆಯಿಂದ ಆದೇಶ

Update: 2020-03-09 21:48 IST

ಉಡುಪಿ, ಮಾ.9: ಸೋಮವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತಾಧಿಕಾರಿಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ನೊವೆಲ್ ಕೊರೋನ ವೈರಸ್ (ಕೋವಿಡ್-19) ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ವೈರಸ್‌ನಿಂದ ರಕ್ಷಿಸಲು ಪರೀಕ್ಷೆಯನ್ನು ಬೇಗನೇ ಮುಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕೆಲವು ಸಲಹೆಗಳನ್ನು ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಎಲ್ಲಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳೊಂದಿಗೆ ನಡೆಸಿದ ವಿಡಿಯೋ ಸಂವಾದ ಕಾರ್ಯಕ್ರಮ ದಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 1ರಿಂದ 9ನೇ ತರಗತಿಯವೆರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಕಾಲಮಿತಿಯೊಳಗೆ ನಡೆಸಿ ರಜೆಯನ್ನು ಘೋಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದರಂತೆ ಒಂದನೇ ತರಗತಿಯಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾ.11ರಿಂದ 16ರ ಒಳಗೆ ವಾರ್ಷಿಕ ಪರೀಕ್ಷೆಯನ್ನು ಪೂರ್ಣ ಗೊಳಿಸುವಂತೆ ಸೂಚಿಸಲಾಗಿದೆ. ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.23ರೊಳಗೆ ಎಲ್ಲಾ ಪರೀಕ್ಷೆಯನ್ನು ಪೂರ್ಣ ಗೊಳಿಸಲು ತಿಳಿಸಲಾಗಿದೆ. 10ನೇ ತರಗತಿ (ಎಸ್ಸೆಸೆಲ್ಸಿ) ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಲು ತಿಳಿಸಲಾಗಿದೆ.

ಮೇಲಿನ ವೇಳಾಪಟ್ಟಿಯಂತೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲಾ ಡಿಡಿಪಿಐಗಳಿಗೂ ಸುತ್ತೋಲೆಯನ್ನು ಕಳುಹಿಸಿದ್ದಾರೆ.

ಉಳಿದಂತೆ ಶಾಲೆ ನಡೆಯುವ ದಿನಗಳಂದು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರತಿದಿನ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಯಾವುದೇ ವಿದ್ಯಾರ್ಥಿ ಜ್ವರ, ಕೆಮ್ಮು, ನೆಗಡಿ ಅಥವಾ ಇತರೆ ಯಾವುದೇ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಿ ಕಡ್ಡಾಯ ರಜೆಯನ್ನು ನೀಡಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಸುರಕ್ಷತಾ ಕ್ರಮವಾಗಿ ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಆಂತಹ ವಿದ್ಯಾರ್ಥಿಗಳಿಗೆ ಅನುಮತಿ ನೀಡುವಂತೆಯೂ ಡಿಡಿಪಿಐ ಗಳಿಗೆ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News