ಬಿಬಿಎಂಪಿ ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಯಾಕೆ ದಾಖಲಿಸಬಾರದು ?: ಹೈಕೋರ್ಟ್

Update: 2020-03-09 18:45 GMT

ಬೆಂಗಳೂರು, ಮಾ.9: ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳ ತೆರವು ಹಾಗೂ ಸಮೀಕ್ಷೆಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಯಾಕೆ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಬಾರದೆಂದು ತಿಳಿಸಲು ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.

ಅನಧಿಕೃತ ಕಟ್ಟಡಗಳ ತೆರವು ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ಸರ್ವೇ ಕಾರ್ಯ ನಡೆಸಲು ಹಲವು ಬಾರಿ ನಿರ್ದೇಶಿಸಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಯಾಕೆ ನಿಮ್ಮ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಬಾರದೆಂದು ತಿಳಿಸಲು ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು.

ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಯಮಾವಳಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡ, ಅಕ್ರಮ ಕಟ್ಟಡ, ನಕ್ಷೆ ಇಲ್ಲದ ಕಟ್ಟಡಗಳನ್ನು ನೆಲಸಮಗೊಳಿಸಿ, ಇದಕ್ಕಾಗಿ ಸರಕಾರ ಸಿಬ್ಬಂದಿ ಹಾಗೂ ಅಗತ್ಯ ಸಂಪನ್ಮೂಲ ಒದಗಿಸಲು ಈ ಹಿಂದೆಯೇ ಆದೇಶಿಸಿತ್ತು. ಆದರೂ ಈ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಿಬಿಎಂಪಿ ವಿರುದ್ಧ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಬಿಬಿಎಂಪಿ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, 2020ರ ಎ.1ರಿಂದ ಅನಧಿಕೃತ ಕಟ್ಟಡಗಳ ಬಗ್ಗೆ ಸರ್ವೇ ಕಾರ್ಯ ನಡೆಸುತ್ತೇವೆ ಎಂದು ಪ್ರಮಾಣ ಪತ್ರ ಸಲ್ಲಿಸಿದರು. ಸರ್ವೇ ಕಾರ್ಯ ನಡೆಸಬೇಕೆಂದು ಈ ಮೊದಲೆ ನಿರ್ದೇಶಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News