×
Ad

ಎಸೆಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 14,034 ವಿದ್ಯಾರ್ಥಿಗಳು: ಉಡುಪಿ ಜಿಲ್ಲಾಧಿಕಾರಿ

Update: 2020-03-10 20:32 IST

ಉಡುಪಿ, ಮಾ.10: ಜಿಲ್ಲೆಯಲ್ಲಿ ಮಾ.27ರಿಂದ ಎ.9ರವರೆಗೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13,028 ರೆಗ್ಯೂಲರ್, 484 ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅ್ಯರ್ಥಿಗಳು ಸೇರಿದಂತೆ ಒಟ್ಟು 14,034 ಮಂದಿ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಎಸೆಸೆಲ್ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ನಡೆದ ಪೂರ್ವ ಭಾವಿ ಸಬೆಯ ಅಧ್ಯಕ್ಷತೆ ಹಿಸಿ ಅವರು ಮಾತನಾಡುತಿದ್ದರು.

ಎಸೆಸೆಲ್ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿಯನ್ನು ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿಭದ್ರತೆಯಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಪರೀಕ್ಷಾ ಸಿದ್ದತೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಯಾವುದೇ ಲೋಪದೋಷಗಳಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸ ಬೇಕು. ಅಕ್ರಮಗಳಿಗೆ ಎಡೆ ನೀಡದೆ ಎಲ್ಲಾ ಪರೀಕ್ಷೆಗಳು ಸಾಂಗವಾಗಿ ಮತ್ತು ವ್ಯವಸ್ಥಿತ ವಾಗಿ ನಡೆಯುವಂತೆ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆಯ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲು ಹಾಗೂ ಕೇಂದ್ರದ 200ಮೀ. ಆಸುಪಾಸಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿದ ಜಿಲ್ಲಾಧಿಕಾರಿ ಜಗದೀಶ್, ಕಾನೂನನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.

ಪರೀಕ್ಷೆ ಕುರಿತು ವಾಟ್ಸಾಪ್ ಮೂಲಕ ಸುಳ್ಳು ಸುದ್ದಿ, ನಕಲಿ ಪ್ರಶ್ನೆ ಪತ್ರಿಕೆಗಳನ್ನು ಹರಿಯ ಬಿಡುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸ ಲಾಗುವುದು ಎಂದವರು ಎಚ್ಚರಿಸಿದರು. ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿ ಗಳೊಂದಿಗೆ ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಪರೀಕ್ಷಾ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಇದಕ್ಕಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸ ಲಾಗುವುದು ಎಂದ ಜಿ.ಜಗದೀಶ್, ಪರೀಕ್ಷಾ ಜಾಗೃತ ದಳದ ಅಧಿಕಾರಿಗಳು ನಿಯಮಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಶೀಲನೆ ನಡೆಸಿ, ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಮತ್ತು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News