ಕೆ.ಸಿ.ವ್ಯಾಲಿ ಯೋಜನೆ ವಿಚಾರ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಫೆ.10: ಕೋರಮಂಗಲ-ಚಲಘಟ್ಟ ಕಣಿವೆಯ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳಿಗೆ ತುಂಬಿಸುವುದರಿಂದ ಅಂತರ್ಜಲ ವಿಷಮಗೊಂಡು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿಯಾಗಿ ದಾಖಲಿಸಲು ಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯರೆಡ್ಡಿ ಮತ್ತಿತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ನಡೆಯಿತು. ಕೆ.ಸಿ.ವ್ಯಾಲಿ ವಿಚಾರದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್‌ನವರು ನೀರಿನ ಗುಣಮಟ್ಟ ಸಂಬಂಧ ತಜ್ಞ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಆದರೆ, ಅರ್ಜಿದಾರರು ತಜ್ಞ ಅಧಿಕಾರಿಗಳೇ ಈ ಯೋಜನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಯಾವ ಆಧಾರದಲ್ಲಿ ಇಂತಹ ಆರೋಪಗಳನ್ನು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಲ್ಲದೇ ಪಿಐಎಲ್ ಅರ್ಜಿಯನ್ನು ಸ್ವಯಂ ಪ್ರೇರಿತ ಅರ್ಜಿಯಾಗಿ ದಾಖಲಿಸಲು ಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.