×
Ad

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕ

Update: 2020-03-11 15:31 IST

ಬೆಂಗಳೂರು, ಮಾ.11: ನಿರೀಕ್ಷೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸೇರಿದಂತೆ ಎರಡೂ ಹುದ್ದೆಗಳಲ್ಲಿ ಮುಂದುವರಿಸಲಾಗಿದೆ.

ಅಲ್ಲದೆ, ವಿಧಾನ ಪರಿಷತ್ ವಿರೋಧ ಪಕ್ಷದ ಸಚೇತನರನ್ನಾಗಿ ಮೇಲ್ಮನೆ ಸದಸ್ಯ ಎಂ. ನಾರಾಯಣಸ್ವಾಮಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ಸಚೇತನರನ್ನಾಗಿ ಶಾಸಕ ಅಜಯ್ ಸಿಂಗ್ ಅವರನ್ನು ನೇಮಕ ಮಾಡುವ ಮೂಲಕ ಕೆಪಿಸಿಸಿಗೆ ಹೊಸ ತಂಡವನ್ನು ರಚನೆ ಮಾಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಜತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರೂ ರಾಜೀನಾಮೆ ಸಲ್ಲಿಸಿದ್ದರು.

ಆದರೆ, ಹೈಕಮಾಂಡ್ ಇಬ್ಬರ ರಾಜೀನಾಮೆಯನ್ನೂ ಸ್ಪೀಕರಿಸಿರಲಿಲ್ಲ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡರಾದ ಎಂ.ಬಿ.ಪಾಟೀಲ್, ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಮುಖಂಡರು ಲಾಬಿ ನಡೆಸಿದ್ದರು. ಇದೀಗ ಎಐಸಿಸಿ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.

ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಲ್ಲೆ ಮುಂದುವರಿಸಿದ್ದು, ವಾಲ್ಮೀಕಿ(ನಾಯಕ) ಸಮುದಾಯ ಹಿರಿಯ ಮುಖಂಡ ಸತೀಶ್ ಜಾರಕಿಹೊಳಿ ಅವರನ್ನು ಹಾಗೂ ಅಲ್ಪಸಂಖ್ಯಾತ(ಮುಸ್ಲಿಮ್) ಸಮುದಾಯದ ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷ ಸ್ಥಾನಕ್ಕೆ ನಿಯೋಜನೆ ಮಾಡಲಾಗಿದೆ.

ಬಣ ರಾಜಕೀಯಕ್ಕೆ ಇತಿಶ್ರೀ ಹಾಡುವ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದ್ದು, ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ಮುಂದುವರೆಸುವ ಮೂಲಕ ಹೈಕಮಾಂಡ್ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂಬ ಸಂದೇಶವನ್ನು ರವಾನಿಸಿದಂತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಭಿನಂದನೆ

ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ನೂತನ ಅಧ್ಯಕ್ಷರನ್ನು ನೇಮಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೃತಜ್ಞತೆಗಳು. ಶಿವಕುಮಾರ್ ಅವರಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸಹಕಾರ ನೀಡಿ ಪಕ್ಷಕ್ಕೆ ಇನ್ನಷ್ಟು ಬಲ ತುಂಬಬೇಕೆಂದು ಕೋರುತ್ತೇನೆ’

-ಸಿದ್ದರಾಮಯ್ಯ ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News