×
Ad

ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಪಟ್ಟು: ವಿಧಾನಸೌಧಕ್ಕೆ ಮುತ್ತಿಗೆ

Update: 2020-03-11 17:28 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.11: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಸಂಬಂಧ ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ನಡೆಸಲಾಯಿತು.

ಬುಧವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಮಾದಿಗ ದಂಡೋರ (ಎಂಆರ್‌ಪಿಎಸ್) ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರಕಾರ ಈ ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ಸದಾಶಿವ ಆಯೋಗದ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳಾಗಿವೆ. ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಕಳುಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜಕೀಯ ಒತ್ತಡಕ್ಕೆ ಮಣಿದು ವರದಿಯನ್ನು ನಿರ್ಲಕ್ಷ ಮಾಡಲಾಗುತ್ತಿದೆ. ಅಲ್ಲದೆ, ಇಲ್ಲಿಯವರೆಗೂ ತಾಳ್ಮೆಯಿಂದ ಬಂದಿದ್ದೇವೆ, ಸಹನೆಯ ಕಟ್ಟೆಯೊಡೆದರೆ, ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಾದಿಗ ದಂಡೋರ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್.ರಾಮಕೃಷ್ಣ ವಾಗ್ದಾಳಿ ನಡೆಸಿದರು.

ಶೋಷಿತರಿಗೆ ರಾಜಕೀಯ, ಶೆಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಸಾಕಾರವಾಗಲು ಸಂವಿಧಾನ ಬದ್ಧವಾಗಿ ಮೂಲ ಹಕ್ಕುಗಳನ್ನು ನೀಡಲಾಗಿದೆ. ಆದರೆ, ಅದು ಈ ಎಲ್ಲ ಉಪ ಜಾತಿಗಳ ನಡುವೆ ಇನ್ನೂ ಸರಿಯಾಗಿ ಹಂಚಿಕೆಯಾಗಿಲ್ಲ. ಅಷ್ಟೇ ಅಲ್ಲದೆ, ಮಾದಿಗ ಸಮಾಜವು ಸೌಲಭ್ಯಗಳಿಂದ ವಂಚಿತವಾಗಿದೆ. ತಾರತಮ್ಯಕ್ಕೆ ಒಳಗಾಗಿದೆ. ಸುಮಾರು 85 ಉಪ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಹಿನ್ನೆಲೆಯಲ್ಲಿಯೇ ಆಯೋಗ ರಚನೆಯಾಗಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ, ರಾಜ್ಯಾಧ್ಯಕ್ಷ ಬಿ.ನರಸಪ್ಪದಂಡೋರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News