ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಿಯಮದ ಅನುಸಾರ ನಡೆದಿದೆ: ಹೈಕೋರ್ಟ್‌ಗೆ ಹೇಳಿಕೆ

Update: 2020-03-11 17:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.11: ರಾಜ್ಯದಲ್ಲಿ ಶಾಲೆ ಬಿಟ್ಟ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು 2020ರ ಜನವರಿಯಲ್ಲಿ ರಾಜ್ಯ ಸರಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ-2012ರ ನಿಯಮ 6ರ ಅನುಗುಣವಾಗಿಯೇ ನಡೆಸಿದೆ ಎಂದು ಅಮಿಕಸ್ ಕ್ಯೂರಿ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್‌ಗೆ ಮಾಹಿತಿ ನೀಡಿದರು. 

ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. 2020ರ ಜನವರಿಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಅರ್ಧದಲ್ಲಿ ಶಾಲೆ ಬಿಟ್ಟ ಮತ್ತು ಶಾಲೆಯಿಂದ ಸಂಪೂರ್ಣವಾಗಿ ಹೊರಗುಳಿದ ಮಕ್ಕಳ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ಉಚಿತ ಮತ್ತು ಕಡ್ಡಾಯ ಶಿಕ್ಷಣ-2012ರ ನಿಯಮ 6ರ ಅನುಗುಣವಾಗಿ ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಿದ್ದಾರೆ ಎಂದು ಅಮಿಕಸ್‌ಕ್ಯೂರಿ ಅವರು ಪೀಠಕ್ಕೆ ತಿಳಿಸಿದರು.

ಸರಕಾರದ ಪರ ವಾದಿಸಿದ ವಕೀಲರು, ರಾಜ್ಯದಲ್ಲಿ 967 ಶಿಕ್ಷಣ ಸಂಯೋಜಕರ ಹುದ್ದೆಗಳ ಪೈಕಿ 357 ಹುದ್ದೆ ಭರ್ತಿ ಆಗಿದ್ದು, 2018ರ ಅ.6ರಿಂದ 610 ಹುದ್ದೆ ಖಾಲಿ ಇವೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರೆ ಕಾತ್ಯಾಯಿನಿ ಚಾಮರಾಜ್ ಅವರು ವಾದಿಸಿ, ಆರ್‌ಟಿಇ ಕಾಯ್ದೆ ಪ್ರಕಾರ ಸ್ಥಳೀಯ ಆಡಳಿತ ಸಂಸ್ಥೆಗಳು ಪ್ರತಿ ವರ್ಷ ಆಯಾ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ಅಂಕಿ-ಸಂಖ್ಯೆಗಳನ್ನು ಸಂಗ್ರಹಿಸಬೇಕು. ಆದರೆ, ಈ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು ಮಾ.12ರಂದು ಈ ಕುರಿತು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News