ಮೈಸೂರು: ಅಧಿಕ ಬೆಲೆಗೆ ಮಾಸ್ಕ್ ಮಾರಾಟ ಆರೋಪ; ಮೆಡಿಕಲ್ ಸ್ಟೋರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಪಾಲಿಕೆ ಸದಸ್ಯರು

Update: 2020-03-11 17:44 GMT

ಮೈಸೂರು, ಮಾ.11: ರಾಜ್ಯದ ಜನರು ಕೊರೋನ ವೈರಸ್ (ಕೋವಿಡ್ 19) ನಿಂದಾಗಿ ಭಯಭೀತರಾಗಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಗಳನ್ನು ಧರಿಸುತ್ತಿದ್ದಾರೆ. ಈ ನಡುವೆ ಮೆಡಿಕಲ್ ಸ್ಟೋರ್ ಗಳಲ್ಲಿ ಮಾಸ್ಕ್ ಗಳು ಸಿಗುತ್ತಿಲ್ಲ, ಅಧಿಕ ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಇಂದು ನಗರಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಿ ನೇತೃತ್ವದಲ್ಲಿ ಸದಸ್ಯರು ಹಾಗೂ ಆರೋಗ್ಯ ಅಧಿಕಾರಿಗಳು ಕೆ.ಆರ್.ಆಸ್ಪತ್ರೆ ಹಾಗೂ ನಗರದ ಕೆಲವು ಮೆಡಿಕಲ್ ಸ್ಟೋರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಿ ಮಾತನಾಡಿ, ಕೆಲವು ಮೆಡಿಕಲ್ ಸ್ಟೋರ್ ಗಳಲ್ಲಿ ಅಧಿಕ ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ನಗರಪಾಲಿಕೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ. ಮಾಸ್ಕ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವುದು ಸಾಬೀತಾದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರಪಾಲಿಕೆ ಆರೋಗ್ಯ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಏನಾದರೂ ಕೊರತೆ ಇದೆಯೇ? ನಗರಪಾಲಿಕೆಯಿಂದ ಸಹಕಾರ ಅಗತ್ಯವಿದೆಯೇ ಎಂದು ಪರಿಶೀಲಿಸಿದ್ದೇವೆ. ರಾಜ್ಯದಲ್ಲಿ ಕೊರೋನ ವೈರಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕ ವಾರ್ಡ್ ಅನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News