×
Ad

ಇನ್ನೆರಡು ತಿಂಗಳಲ್ಲಿ 2 ಸಾವಿರ ವೈದ್ಯರ ನೇರ ನೇಮಕ: ಆರೋಗ್ಯ ಸಚಿವ ಶ್ರೀರಾಮುಲು

Update: 2020-03-12 17:58 IST

ಬೆಂಗಳೂರು, ಮಾ. 12: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 2 ಸಾವಿರ ವೈದ್ಯರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಇನ್ನು ಎರಡು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಎಸ್ಸಿ ಮೂಲಕ ವೈದ್ಯರ ನೇಮಕಾತಿ ವಿಳಂಬವಾಗುತ್ತಿದ್ದ ಕಾರಣಕ್ಕೆ ಇದೀಗ ನೇರವಾಗಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

800 ಶುಶ್ರೂಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ಹುದ್ದೆಗಳ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಡಿಸಿಗಳಿಗೆ ಅಧಿಕಾರ ನೀಡಲಾಗಿದೆ. ಆಸಕ್ತ ವೈದ್ಯರು ಸೇವೆಗೆ ಮುಂದೆ ಬಂದರೆ ಡಿಸಿಗಳೇ ತೀರ್ಮಾನ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸುಧಾರಣೆಗೆ ಆದ್ಯತೆ: ಸರಕಾರಿ ಆಸ್ಪತ್ರೆಗಳಿಗೆ ಬಡ-ಮಧ್ಯಮ ವರ್ಗದವರು ಚಿಕಿತ್ಸೆಗೆ ಬರುತ್ತಾರೆ. ಹೀಗಾಗಿ ನಾನೇ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲೆ ವಾಸ್ತವ್ಯ ಮಾಡುವ ಮೂಲಕ ವಾಸ್ತವ ಪರಿಸ್ಥಿತಿ ತಿಳಿದಿದ್ದೇನೆ. ಸಿಬ್ಬಂದಿ ಕೊರತೆ ಪರಿಹರಿಸಲು ಆದ್ಯತೆ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ನಮ್ಮ ಸರಕಾರಿ ಆಸ್ಪತ್ರೆಗಳು ಇರಬೇಕೆಂಬುದು ನನ್ನ ಅಭಿಲಾಷೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಒಟ್ಟು 2,359 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 1,432 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 436 ಕೇಂದ್ರಗಳಲ್ಲಿ ಎಂಬಿಬಿಎಸ್ ಗುತ್ತಿಗೆ ವೈದ್ಯರು, 236 ಕೇಂದ್ರಗಳಲ್ಲಿ ಆಯುಷ್ ವೈದ್ಯರು, 55 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಡಿ ವೈದ್ಯರು ಕೆಲಸ ಮಾಡುತ್ತಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್(ಎನ್‌ಎಚ್‌ಎಂ) ಅಡಿಯಲ್ಲಿ 159 ವೈದ್ಯರು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಲ್ಲ ಸರಕಾರಿ ಆಸ್ಪತ್ರೆಗಳು ಖಾಯಂ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಶ್ರೀರಾಮುಲು ತಿಳಿಸಿದರು.

ತಾರತಮ್ಯ ಸರಿಪಡಿಸುತ್ತೇವೆ: ‘ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ವೈದ್ಯರು ಹಾಗೂ ಆರೋಗ್ಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿ ವೇತನ ತಾರತಮ್ಯವನ್ನು ಸರಿಪಡಿಸಲು ಶೀಘ್ರವೇ ಸರಕಾರ ಅಗತ್ಯ ಕ್ರಮ ವಹಿಸಲಿದೆ’

-ಬಿ.ಶ್ರೀರಾಮುಲು, ಆರೋಗ್ಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News