ದಿಲ್ಲಿ ಹಿಂಸಾಚಾರ: ಪಿಎಫ್‍ಐ ಮುಖಂಡರ ಬಿಡುಗಡೆಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

Update: 2020-03-13 12:17 GMT

ಮಡಿಕೇರಿ, ಮಾ.13: ದಿಲ್ಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ)ದ ನಾಯಕರನ್ನು ಹಾಗೂ ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮತ್ತು ಬಂಧಿತರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‍ಡಿಪಿಐ) ಕೊಡಗು ಜಿಲ್ಲಾ ಘಟಕ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಅಸಮಾಧಾನ ವಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಪಿಎಫ್‍ಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ, ಹಿಂದೂ ಹಾಗೂ ಮುಸ್ಲಿಮರಲ್ಲಿ ಒಡಕುಂಟು ಮಾಡುತ್ತಿದೆ ಎಂದು ಆರೋಪಿಸಿದರು. ಎನ್‍ಆರ್‍ಸಿ, ಸಿಎಎ ಕಾಯ್ದೆ ಮುಸ್ಲಿಮರ ಭಾವನೆಗೆ ವಿರುದ್ಧವಾಗಿದ್ದು, ಈ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು.   

ಆರ್ಥಿಕ ವ್ಯವಸ್ಥೆ ಕುಸಿಯುತ್ತಿದ್ದು, ದೇಶ ಅಭದ್ರತೆಯ ಹಾದಿಯಲ್ಲಿ ಸಾಗುತ್ತಿದೆ. ದೆಹಲಿಯ ಹೃದಯ ಭಾಗದಲ್ಲಿ ಪೊಲೀಸ್ ಕಣ್ಗಾವಲಿದ್ದರೂ, ಕೋಮು ಗಲಭೆ ಸೃಷ್ಟಿಸಲಾಗಿದೆ. ಇದು ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು. ಎಲ್ಲರು ಒಗ್ಗಟ್ಟಿನಿಂದ ಹೋರಾಟ ನಡೆಸಿದಾಗ ಮಾತ್ರ ಶೋಷಣೆಯನ್ನು ತಡೆಯಬಹುದಾಗಿದೆ ಎಂದರು. ದೆಹಲಿ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದ್ದು, ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್, ಕಾರ್ಯದರ್ಶಿ ಕಬೀರ್, ನಗರಾಧ್ಯಕ್ಷ ಮನ್ಸೂರ್, ಬದ್ರಿಯಾ ಮಸೀದಿ ಅಧ್ಯಕ್ಷ ಯುಸೂಫ್ ಹಾಜಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಡಿಕೇರಿ ತಾಲೂಕು ಸಂಚಾಲಕ ಎ.ಪಿ.ದೀಪಕ್, ವಿಭಾಗೀಯ ಸಂಚಾಲಕ ವೀರಭದ್ರಯ್ಯ ಹಾಗೂ ಎಸ್‍ಡಿಪಿಐ ಮತ್ತು ಪಿಎಫ್‍ಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News