ಕೊರೋನ ವೈರಸ್ ಭೀತಿ: ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಮಾ.13: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆ(ಮಾ.14)ಯಿಂದ ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. 1 ರಿಂದ 9 ನೇ ತರಗತಿವರೆಗೂ ಮಾ.14 ರಿಂದ ಜಾರಿಗೆ ಬರುವಂತೆ ತರಗತಿಗಳನ್ನು ಸ್ಥಗಿತಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
1 ರಿಂದ 6 ನೇ ತರಗತಿವರೆಗಿನ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ, ಈ ಹಿಂದೆ ನಡೆದ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶ್ರೇಣೀಕೃತ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗಳಿಗೆ ಭಡ್ತಿ ನೀಡಬೇಕು. ಉಳಿದಂತೆ 7 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆಯ ಮಾದರಿಯಲ್ಲಿ ಸ್ಥಗಿತಗೊಳಿಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗಲು ಸೂಚಿಸಬೇಕು. ಮಾ.23 ರೊಳಗೆ ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ತಿಗೊಳಿಸಿ, ಬೇಸಿಗೆ ರಜೆ ನೀಡಬೇಕಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸುರಕ್ಷತಾ ಕ್ರಮವಾಗಿ ಮಾಸ್ಕ್ ಧರಿಸಿ ಪರೀಕ್ಷೆಯನ್ನು ಬರೆಯಲು ಇಚ್ಛಿಸಿದ್ದಲ್ಲಿ, ಅಂತಹ ವಿದ್ಯಾರ್ಥಿಗಳಿಗೆ ಅನುಮತಿ ನೀಡಬೇಕು. ಪರೀಕ್ಷೆ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ. ಇದು ರಾಜ್ಯದ ಎಲ್ಲ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಸಿ, ಐಸಿಎಸ್‌ಸಿ, ಐಜಿಸಿಎಸ್‌ಸಿ, ಐಬಿ ಎಲ್ಲ ಪಠ್ಯಕ್ರಮದ ಶಾಲೆಗಳಿಗೂ ಅನ್ವಯವಾಗಲಿದೆ.
ಎಸೆಸೆಲ್ಸಿ ಪರೀಕ್ಷೆಗಳು ಸಕಾಲಕ್ಕೆ: ಕೊರೋನ ಭೀತಿಯ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಿಸಿಲ್ಲ. ಹೀಗಾಗಿ, ಆ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
15 ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಣೆ
ಮಾ.14 ಮಾ.28 ರವರೆಗೂ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಿಗೆ ರಾಜ್ಯದಾದ್ಯಂತ ರಜೆ ಘೋಷಿಸಿ, ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದ್ದು, ಇಂದಿನಿಂದ 15 ದಿನಗಳ ಕಾಲ ಎಲ್ಲ ವಿದ್ಯಾರ್ಥಿಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮುಂದುವರಿದು, ಎಂದಿನಂತೆ ಕಾಲೇಜಿನ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.
ಪರೀಕ್ಷೆ ಮುಂದೂಡಿಕೆ ಇಲ್ಲ: ಈ ನಡುವೆ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಾವುದೇ ಕಾರಣಕ್ಕೂ ಮುಂದೂಡುವ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ಎಂದಿನಂತೆ ಮಾ.14 ರಂದು ನಡೆಯಲಿರುವ ಸೈಕಾಲಜಿ, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಪರೀಕ್ಷಾ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಹೇಳಿದ್ದಾರೆ.