‘ಕೊರೋನ ವೈರಸ್’ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ: ಅರವಿಂದ ಲಿಂಬಾವಳಿ

Update: 2020-03-14 17:21 GMT

ಬೆಂಗಳೂರು, ಮಾ.14: ರಾಜ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಕೊರೋನ ವೈರಸ್ ಬಗ್ಗೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚಿಸಲಾಯಿತು. ರಾಜ್ಯ ಸರಕಾರ ತೆಗೆದುಕೊಂಡಿರುವ ದಿಟ್ಟ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದರು.

ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಕೊರೋನ ವೈರಸ್ ನಿಯಂತ್ರಣದ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸುವ ಪ್ರಚಾರ ಕೈಗೊಳ್ಳಬೇಕು ಎಂದರು.

ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿನ ತಮ್ಮ ತಮ್ಮ ಗುಂಪುಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ ಪಕ್ಷದ ವತಿಯಿಂದ ದೊಡ್ಡದೊಡ್ಡ ಸಭೆ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದಂತೆ ಸೂಚನೆ ನೀಡಲಾಯಿತು ಎಂದು ಅವರು ಹೇಳಿದರು.

ನಮ್ಮ ಊರುಗಳಲ್ಲಿ ಯಾರು ವಿದೇಶದಿಂದ ಆಗಮಿಸುತ್ತಾರೊ ಅವರ ಬಗ್ಗೆ ವಿಶೇಷ ಗಮನ ಹರಿಸಿ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಸಂಬಂಧಪಟ್ಟ ವೈದ್ಯಾಧಿಕಾರಿಗಳ ಗಮನಕ್ಕೆ ತರುವಂತ ಕೆಲಸ ಆಗಬೇಕು. ಯಾಕೆಂದರೆ ಸಮಾಜದ ಒಳಿತಿಗಾಗಿ ಅವರ ಆರೋಗ್ಯ ಕಾಪಾಡುವುದು ಹಾಗೂ ರೋಗ ಹರಡಬಾರದು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಯಿತು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

ಅಧಿವೇಶನದ ಅವಧಿಯಲ್ಲಿ ಮುಖ್ಯಮಂತ್ರಿ ಆಯಾ ಜಿಲ್ಲಾ ಶಾಸಕರ ಜೊತೆಯಲ್ಲಿ ಸಭೆಗಳನ್ನು ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಬೇರೆ ಬೇರೆ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಅಭಿವೃದ್ಧಿಯ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಪ್ರಾರಂಭಗೊಂಡ ರಾಜ್ಯ ಮತ್ತು ಜಿಲ್ಲೆಯ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಎರಡು ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳ ಅಧ್ಯಕ್ಷರ ನೇಮಕಾತಿ ಆಗಿದೆ. ಉಳಿದ ನೇಮಕಾತಿ ಪ್ರಕ್ರಿಯೆಯನ್ನು ಮಾ.31ರೊಳಿಗೆ ಮುಗಿಸಬೇಕೆಂದು ಕೇಂದ್ರದ ಸೂಚನೆ ಬಂದಿದ್ದು, ಅದರಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಬರಲಿರುವ ಹಿನ್ನೆಲೆಯಲ್ಲಿ ರಚನೆಯಾಗಿರುವ ಬೂತ್ ಸಮಿತಿಗಳ ಸಭೆಗಳನ್ನು ನಡೆಸುವುದರ ಜೊತೆಗೆ ಎಲ್ಲ ಬೂತುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಬೂತ್ ಮಟ್ಟದ ಏಜೆಂಟ್, ಮತದಾರರ ಪಟ್ಟಿಯಲ್ಲಿ ಮತದಾರರನ್ನು ಸೇರಿಸುವ ಪ್ರಮುಖ ಕಾರ್ಯಕರ್ತ ಹಾಗೂ ಜಿಲ್ಲಾ ಮಟ್ಟದ ಪ್ರಶಿಕ್ಷಣ ಶಿಬಿರಗಳನ್ನು ಎಪ್ರಿಲ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದರು.

ಮುಂಬರುವ ನಾಲ್ಕು ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೋರ್ ಕಮಿಟಿ ತೀರ್ಮಾನದಂತೆ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಕಳುಹಿಸಿಕೊಡಲಾಗಿದೆ. ಅಲ್ಲಿ ತೀರ್ಮಾನ ಕೈಗೊಂಡ ನಂತರ ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಮಾಧ್ಯಮ ಸಂಚಾಲಕ ಎ.ಎಚ್.ಆನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಧಾನಪರಿಷತ್ ಚುನಾವಣಾ ಉಸ್ತುವಾರಿಗಳ ನೇಮಕ
ಬೆಂಗಳೂರು ಶಿಕ್ಷಕರ ಕ್ಷೇತ್ರ-ಅರವಿಂದ ಲಿಂಬಾವಳಿ, ಆರ್.ಅಶೋಕ್, ವಿ.ಸೋಮಣ್ಣ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಪಶ್ಚಿಮ ಪದವೀಧರ ಕ್ಷೇತ್ರ-ಮಹೇಶ್ ಟೆಂಗಿನಕಾಯಿ, ಸಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಈಶಾನ್ಯ ಶಿಕ್ಷಕರ ಕ್ಷೇತ್ರ-ಎನ್.ರವಿಕುಮಾರ್, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಪದವೀಧರ ಕ್ಷೇತ್ರ-ಡಾ.ಶಿವಯೋಗಿ ಸ್ವಾಮಿ, ಸಿ.ಟಿ.ರವಿ, ಡಾ.ವೈ.ಎ.ನಾರಾಯಣ ಸ್ವಾಮಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News