'ಪಾಕಿಸ್ತಾನ ಝಿಂದಾಬಾದ್' ಘೋಷಣೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅಮೂಲ್ಯ

Update: 2020-03-17 16:49 GMT

ಬೆಂಗಳೂರು, ಮಾ.17: ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆದ ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಅಮೂಲ್ಯ ಲಿಯೋನಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಗರದ 60ನೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪ್ರಾಸಿಕ್ಯೂಷನ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಫ್ರೀಡಂ ಪಾರ್ಕ್‌ನಲ್ಲಿ ಅಸದುದ್ದೀನ್ ಒವೈಸಿ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೂಲ್ಯ ಮಂಗಳವಾರ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಪ್ರಾಸಿಕ್ಯೂಷನ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

ಅಮೂಲ್ಯ ಇಷ್ಟು ದಿನ ಜಾಮೀನಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿರಲಿಲ್ಲ. ಆದರೆ ಇಷ್ಟು ದಿನದ ಜೈಲುವಾಸದ ನಂತರ ಅರ್ಜಿ ಸಲ್ಲಿಕೆ ಮಾಡಿದ್ದಾಳೆ. ಅಮೂಲ್ಯ ಬಂಧನದಿಂದ ಬೇಸತ್ತು ಪ್ರತಿಭಟಿಸಿದ್ದ ಆರ್ದ್ರಾ ಕೂಡ ಜೈಲಿನಲ್ಲಿಯೇ ಇದ್ದು, ಆಕೆಗೂ ಕೂಡ ಜಾಮೀನು ಮಂಜೂರಾಗಿಲ್ಲ. ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಅಮೂಲ್ಯ ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ಪಾಕಿಸ್ತಾನ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಳು. ಕೂಡಲೇ ಆಕೆಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News