ಕಲಬುರಗಿಯಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ
ಬೆಂಗಳೂರು. ಮಾ.17: ಕಲಬುರಗಿ ಜಿಲ್ಲೆಯಲ್ಲಿ ಕೊರೋನ ವೈರಸ್ ಸೊಂಕು ಹರಡದಂತೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸೊಂಕಿತರಿಗೆ ಜಾಗೃತಿಯಿಂದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕಲಬುರಗಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ನಲ್ಲಿ ಜಿಲ್ಲಾಧಿಕಾರಿಗಳು ಹಾಗು ಇತರ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸರಕಾರ ಹೊರಡಿಸಿರುವ ಮಾರ್ಗಸೂಚಿಗಳ ಆದೇಶಗಳನ್ನು ನಿಗದಿತ ಅವಧಿಯವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು. ಪ್ರವಾಸಿ ತಾಣಗಳ ಪ್ರವೇಶಗಳಿಗೆ ನಿಷೇಧ ಮಾಡಬೇಕು. ಹೊರದೇಶದಿಂದ ಬಂದವರನ್ನು ಹೋಂ ಕ್ವಾರಂಟೈನ್‌ನಲ್ಲಿಡಬೇಕು. ಇವರ ಮೇಲೆ ನಿಗಾ ವಹಿಸಬೇಕು. ವಿದೇಶಿ ಪ್ರವಾಸಿಗರು, ವಿದೇಶದಿಂದ ಪ್ರಯಾಣಿಸುವವರ ಮೇಲೆ ತೀವ್ರ ನಿಗಾ ವಹಿಸಬೇಕು.
ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ತೀವ್ರ ನಿಗಾವಹಿಸಬೇಕು. ಪೊಲೀಸ್ ಸಿಬ್ಬಂದಿಯ ಕೊರತೆ ಇದ್ದರೆ ಹೋಮ್ ಗಾರ್ಡ್ ಅಥವಾ ಮಾಜಿ ಸೈನಿಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಬೇಕು. ಪ್ರತಿ ದಿನ ಮೂರು ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ಅಧಿಕೃತ ಮಾಹಿತಿ ನೀಡಬೇಕು. ಮಧ್ಯಮದವರಿಗೂ ಸೂಕ್ತ ಜಾಗೃತಿ ಮೂಡಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್‌ಗೆ ಕಟ್ಟುನಿಟ್ಟಾಗಿ ಕ್ರಮವಹಿಸಬೇಕು. ಸಾರ್ವಜನಿಕರಿಗೆ ಹಾಗೂ ಬಸ್, ರೈಲ್ವೆ ನಿಲ್ದಾಣ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು.
ಗಾಣಗಾಪುರ ಧಾರ್ಮಿಕ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚು ನಿಗಾವಹಿಸಿ, ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಜನಸಾಮಾನ್ಯರಿಗೆ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಾರದು. ಅನುದಾನ, ಅಗತ್ಯ ಔಷಧಿ ಸೇರಿ ಯಾವುದೇ ಸಮಸ್ಯೆಗಳಿದ್ದರೆ ಪರಿಹರಿಸುವುದಾಗಿ ಡಿಸಿಎಂ ತಿಳಿಸಿದರು
ಅನಂತರ ಮಾತನಾಡಿದ ಅವರು, ಕೊರೋನ ವೈರಸ್ ಬಗ್ಗೆ ಹಗುರವಾಗಿ ತೆಗೆದುಕೊಳ್ಳಬಾರದು. ಜಾಗೃತಿಯಿಂದ ಇರಬೇಕು. ಬೇಸಿಗೆ ಪ್ರಾರಂಭವಾಗುವವರೆಗೆ ಜಾಗೃತಿಯಿಂದ ಇರಬೇಕು ಎಂದು ತಜ್ಞವೈದ್ಯರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ಮನವಿ ಮಾಡಿದರು. ಕಲಬುರಗಿಯಲ್ಲಿ ಕೊರೋನ ವೈರಸ್‌ನಿಂದ ನಿಧನರಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸೋಂಕು ಬಂದಿರುವುದು ನೋವಿನ ಸಂಗತಿಯಾಗಿದೆ. ಇತರ ನಾಲ್ವರ ಸ್ಯಾಂಪಲ್ ಕಳುಹಿಸಲಾಗಿದ್ದು, ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯರು ನಾಳೆ ಜಿಲ್ಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚು ಪ್ರಯಾಣ ಮಾಡಬಾರದು. ಸೋಂಕು ಇರುವ ಪ್ರದೇಶಗಳಿಗೆ ಭೇಟಿ ನೀಡದೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದರು.