ಕೊರೋನ: ದ.ಕ. ಜಿಲ್ಲೆಯಲ್ಲಿ 632 ಮಂದಿ ತಪಾಸಣೆ
ಮಂಗಳೂರು, ಮಾ.18: ಕೊರೋನ ಸೋಂಕು ತಡೆಗೆ ಜಿಲ್ಲಾ ಆರೋಗ್ಯ ಇಲಾಖೆಯು ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎನ್‌ಎಂಪಿಟಿ ಸಹಿತ ಜಿಲ್ಲೆಯ ವಿವಿಧೆಡೆ ಸುರಕ್ಷತಾ ದೃಷ್ಟಿಯಿಂದ 632 ಮಂದಿಯನ್ನು ಬುಧವಾರ ತಪಾಸಣೆ ನಡೆಸಿದೆ.
ಕೊರೋನ ಶಂಕೆಯಲ್ಲಿ 689 ಮಂದಿಯನ್ನು ಅವರ ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಿ, ನಿಗಾ ವಹಿಸಲಾಗಿದೆ. ಪ್ರತ್ಯೇಕಿಸಲಾಗಿ ಇರಿಸಿದ್ದ ಎಂಟು ಮಂದಿಯ ಅವಧಿಯು ಪೂರ್ಣಗೊಂಡಿದೆ. ಏತನ್ಮಧ್ಯೆ, ಮೂವರ ರಕ್ತ ಮತ್ತು ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಬುಧವಾರ 14 ಸ್ಯಾಂಪಲ್‌ಗಳ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ವರದಿಗಳಾಗಿವೆ. ಹೊಸದಾಗಿ ಇಬ್ಬರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ನಿಗಾ ಇರಿಸಿದೆ.
55,241 ಮನೆಗೆ ಭೇಟಿ: ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೂ ಭೇಟಿ ನೀಡುತ್ತಿದ್ದು, ಈವರೆಗೆ 55,241 ಮನೆಗಳಿಗೆ ಭೇಟಿ ನೀಡಿದ್ದಾರೆ. 2,12,639 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶದಿಂದ ಬಂದ ಪ್ರಯಾಣಿಕರನ್ನು ಮನೆಯಲ್ಲಿಯೇ ಇರುವಂತೆ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ಬಗ್ಗೆ ಸ್ಥಳೀಯ ಸುದ್ದಿವಾಹಿನಿಗಳಲ್ಲಿ ಏಳು ಕಾರ್ಯಕ್ರಮ ಹಾಗೂ ಸ್ಥಳೀಯ ರೇಡಿಯೊದಲ್ಲಿ ಮೂರು ಕಾರ್ಯಕ್ರಮಗಳನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1,331 ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮ, ಕೆಎಸ್ಸಾರ್ಟಿಸಿ ಡಿಪೋದಲ್ಲಿ ಎಂಟು ತರಬೇತಿ ಕಾರ್ಯಕ್ರಮ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಂದು ಕಾರ್ಯಕ್ರಮ ಆಯೋಜಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತಲಪಾಡಿ, ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದ್ದು, ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ