×
Ad

ಕೊರೋನ ವೈರಸ್ ಭೀತಿ: ದಾವಣಗೆರೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ

Update: 2020-03-18 23:03 IST

ದಾವಣಗೆರೆ, ಮಾ.18: ಜಿಲ್ಲೆಯಲ್ಲಿ ಕೊರೋನ ವೈರಸ್ (ಕೋವಿಡ್-19) ಸೋಂಕು ಪ್ರಕರಣಗಳು ಇದುವರೆಗೆ ವರದಿಯಾಗಿಲ್ಲ. ಬಾಪೂಜಿ ಆಸ್ಪತ್ರೆಯಲ್ಲಿ ಕೊರೋನ ವೈರಸ್ ಸೋಂಕಿಗೆ ಚಿಕಿತ್ಸೆ ನೀಡುವ 5 ಬೆಡ್‍ಗಳುಳ್ಳ ಪ್ರತ್ಯೇಕ ಮಕ್ಕಳ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ಕೊರೋನ ಸೋಂಕಿಗೆ ಸಂಬಂಧಿಸಿದಂತೆ ಬೆಡ್‍ಗಳ ಸಂಖ್ಯೆಯನ್ನು 146ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಬುಧವಾರ ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಕೊರೋನ ವೈರಸ್ ಸೋಂಕು ನಿಯಂತ್ರಣ ಮತ್ತು ತಡೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನ ವೈರಸ್ ಸೋಂಕು ನಿರ್ವಹಣೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಿಲ್ಲೆಯಾದ್ಯಂತ ಮಾ.18 ರಿಂದ 24 ರವರೆಗೆ ಜಾರಿಯಾಗಿದ್ದು, ಆರ್‍ಟಿಓ, ಸಬ್ ರಿಜಿಸ್ಟ್ರಾರ್ ಕಚೇರಿ, ಮಹಾನಗರಪಾಲಿಕೆ, ತಾಲೂಕು ಕಚೇರಿಗಳು ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಕಚೇರಿಗಳಲ್ಲಿ ಜನರನ್ನು ನಿಯಂತ್ರಿಸಲು ಕ್ರಮ ವಹಿಸಬೇಕು. ಆಧಾರ್ ಮಾಡಿಸುವವರಿಗೆ ದಿನಕ್ಕೆ 50 ಟೋಕನ್ ನೀಡಲಾಗುತ್ತಿದೆ. ಇದೇ ರೀತಿಯಲ್ಲಿ ಆರ್‍ಟಿಓ ಕಚೇರಿಯಲ್ಲಿಯೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾರದೇ ಸಹಕರಿಸಬೇಕು. ಹೆಚ್ಚು ಗದ್ದಲ ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ: ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ ಇರಬೇಕು. ಕೆಲವು ನೌಕರರು ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ಹುಬ್ಬಳ್ಳಿ ಇತರೆ ಅಕ್ಕಪಕ್ಕದ ಜಿಲ್ಲೆಗಳಿಂದ ಪ್ರತಿ ದಿನ ಓಡಾಡುತ್ತಿರುವುದು ಕಂಡು ಬಂದಿದೆ. ಅಂತಹ ಸಿಬ್ಬಂದಿಗಳು ಇಂದಿನಿಂದಲೇ ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ ಮಾಡಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದವರ ಮೇಲೆ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ನರೇಗಾದಡಿ ಕಾರ್ಯನಿರ್ವಹಣೆ: ನರೇಗಾ ಯೋಜನೆಯಡಿ ಗ್ರಾಮಗಳಲ್ಲಿ ಒಂದೊಂದು ತಂಡದಲ್ಲಿ ನೂರಾರು ಜನ ಒಟ್ಟೊಟ್ಟಿಗೆ ಕೆಲಸ ನಿರ್ವಹಿಸುತ್ತಾರೆ. ಈ ತಂಡಗಳಲ್ಲಿ ಕಾರ್ಮಿಕರಿಗೆ ಶೀತ, ಕೆಮ್ಮು ಈ ರೀತಿಯ ಲಕ್ಷಣಗಳು ಕಂಡು ಬಂದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲು ಪಿಡಿಓಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕೆಎಸ್‍ಆರ್‍ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ಸೋಪು, ಮಾಸ್ಕ್ ಗಳನ್ನು ಈಗಾಗಲೇ ನೀಡಲಾಗಿದ್ದು, ಇನ್ನು ಮುಂದೆ ಪ್ರಯಾಣಿಕರು ಬಸ್ ಇಳಿದ ನಂತರ ಬಸ್‍ಸ್ಟ್ಯಾಂಡಿನಲ್ಲಿ ಸ್ಯಾನಿಟೈಸರ್ ಅನ್ನು ನೀಡುವ ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಎಲ್ಲ ಸರ್ಕಾರಿ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ಯಾನರ್ ಗಳನ್ನು ಅಳವಡಿಸಬೇಕಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು ಸಂಖ್ಯೆಯಲ್ಲಿ ಥರ್ಮಲ್ ಸ್ಕ್ಯಾನರ್ ಗಳನ್ನು ಖರೀದಿಸಲಾಗುವುದು ಎಂದು ತಿಳಿಸಿದರು..

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಎಎಸ್‍ಪಿ ರಾಜೀವ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಿಡಿಎಲ್‍ಆರ್ ರಾಮಾಂಜನೇಯ, ಆರ್‍ಟಿಓ ಎನ್.ಜೆ.ಬಣಕಾರ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಭಾಸ್ಕರ್ ನಾಯಕ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಹರಿಹರ ನಗರಸಭೆ ಆಯುಕ್ತರಾದ ಲಕ್ಷ್ಮೀ, ದಾವಣಗೆರೆ ತಹಶೀಲ್ದಾರ್ ಸಂತೋಷ್‍ ಕುಮಾರ್, ಇತರೆ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News