ಕಾಲಮಿತಿಯಲ್ಲಿ ವಕ್ಫ್ ಆಸ್ತಿ ಸರ್ವೆಗೆ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಶಿಫಾರಸ್ಸು
ಬೆಂಗಳೂರು, ಮಾ. 19: ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸರ್ವೆ ಕಾರ್ಯವನ್ನು ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಿ ಸರ್ವೆ ಮತ್ತು ಖಾತೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.
ಗುರುವಾರ ವಿಧಾನಸಭೆಯಲ್ಲಿ ಸಮಿತಿ ಅಧ್ಯಕ್ಷ ಎಸ್.ಕುಮಾರ್ ಬಂಗಾರಪ್ಪ ವರದಿಯನ್ನೊಪ್ಪಿಸಿದ್ದು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ವಹಿಸುವ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಪೂರೈಕೆ ಆಗುವ ಎಲ್ಲ ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲನೆ ಕಡ್ಡಾಯವಾಗಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.
ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾದ ಉಪಯೋಗಕ್ಕಾಗಿ ಅಗತ್ಯವಿರುವ 363 ಖಬರಸ್ಥಾನ್‌ಗಳಿಗೆ ಜಾಗವನ್ನು ಶೀಘ್ರವೇ ಮಂಜೂರು ಮಾಡಬೇಕು. ಅಲ್ಲದೆ, ನಕಲಿ ವೈದ್ಯರ ಹಾವಳಿ ತಪ್ಪಿಸಲು ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ಕೆಪಿಎಂಇ ಕಾಯಿದೆಯನ್ನು ಅನುಷ್ಠಾನಗೊಳಿಸಬೇಕು ಎಂದು ಶಿಫಾರಸ್ಸು ಮಾಡಿದೆ.