ಮುಂದಿನ ಶೈಕ್ಷಣಿಕ ವರ್ಷದಿಂದ ‘ಉಚಿತ ಲ್ಯಾಪ್‌ಟಾಪ್ ಯೋಜನೆ’ ಸ್ಥಗಿತ: ಡಾ.ಅಶ್ವಥ್ ನಾರಾಯಣ

Update: 2020-03-19 18:19 GMT

ಬೆಂಗಳೂರು, ಮಾ. 19: ಮೈತ್ರಿ ಸರಕಾರದ ಅವಧಿಯಲ್ಲಿ ಆರಂಭಿಸಿದ್ದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಕೈಬಿಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕ ಆಚಾರ್ ಹಾಲಪ್ಪ ಬಸಪ್ಪ ಪರವಾಗಿ ಮಹಾಂತೇಶ್ ದೊಡ್ಡಗೌಡರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, 2019-20ನೆ ಸಾಲಿನಲ್ಲಿ ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು ಎಂದರು.

2017-18ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಈ ಯೋಜನೆ ಜಾರಿಗೆ ತಂದಿದ್ದು, ನಂತರ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಯೋಜನೆ ಮುಂದುವರಿಸಿದ್ದರು. ಆದರೆ ಇದು ಆರ್ಥಿಕವಾಗಿ ದುಬಾರಿಯಾಗಲಿದೆ. ಸರಕಾರಿ ಪದವಿ ಕಾಲೇಜುಗಳಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದರು. ಆರಂಭದಲ್ಲಿ 96,483 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಆ ಪಟ್ಟಿ ಪರಿಷ್ಕರಿಸಿ ಒಟ್ಟು 1.09 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಇದಕ್ಕೆ 311 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ ಎಂದು ಅವರು ವಿವರ ನೀಡಿದರು.

ಕಾಲೇಜುಗಳಿಗೆ ಕಟ್ಟಡ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಿದ್ದು, 2019-20ನೆ ಸಾಲಿಗೆ ಲ್ಯಾಪ್‌ಟಾಪ್ ನೀಡುವ ಸಂಬಂಧ ಕುಮಾರಸ್ವಾಮಿ ಸರಕಾರ ತೀರ್ಮಾನ ಮಾಡಿದೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಪ್ರಥಮ ವರ್ಷದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು ಎಂದು ಹೇಳಿದರು.

ನೀಡಲು ಸಾಧ್ಯವಿಲ್ಲ: ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್ ನೀಡಬೇಕೆಂಬ ಬೇಡಿಕೆ ಇದೆ. ಆದರೆ, ಅದು ಸಾಧ್ಯವಿಲ್ಲ. ಈ ಹಿಂದೆಯೇ ಸರಕಾರದ ತೀರ್ಮಾನಿಸಿದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ನೀಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News