ಪ್ರತಿಮೆ ಸ್ಥಳಾಂತರಕ್ಕೆ ಕೋರಿ ಅರ್ಜಿ: ಬಿಬಿಎಂಪಿ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-03-20 16:56 GMT

ಬೆಂಗಳೂರು, ಮಾ.20: ಯಶವಂತಪುರ ವೃತ್ತದ(ಸೋಪ್ ಫ್ಯಾಕ್ಟರಿ) ಬಳಿ ನಿರ್ಮಾಣ ಮಾಡಲಾಗಿರುವ ನಾಲ್ಕು ಮಹನೀಯರ ಪ್ರತಿಮೆಗಳನ್ನು ತೆರವುಗೊಳಿಸಬೇಕು ಅಥವಾ ಬೇರೆ ಕಡೆಗೆ ಸ್ಥಳಾಂತರಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರು ಆಗಿರುವ ವಕೀಲ ಎ.ವಿ.ಅಮರನಾಥನ್ ಅವರು ವಾದಿಸಿ, ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಫುಟ್‌ಪಾತ್, ಸಾರ್ವಜನಿಕ ರಸ್ತೆಗಳಲ್ಲಿ ದೇವಸ್ಥಾನ, ಚರ್ಚ್ ಹಾಗೂ ಇತರೆ ಧಾರ್ಮಿಕ ಕೇಂದ್ರಗಳಿದ್ದರೆ ತೆರವುಗೊಳಿಸಬೇಕು. ಆದರೆ, ಯಶವಂತಪುರ ವೃತ್ತದ(ಸೋಪ್ ಫ್ಯಾಕ್ಟರಿ) ವ್ಯಾಪ್ತಿಯಲ್ಲಿ ಫುಟ್‌ಪಾತ್‌ನಲ್ಲಿಯೇ ನಾಲ್ವರು ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ಇದರಿಂದ, ಟ್ರಾಫಿಕ್ ಜಾಮ್ ಆಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ, ಈ ನಾಲ್ಕು ಮಹನೀಯರ ಪ್ರತಿಮೆಗಳನ್ನು ತೆರವುಗೊಳಿಸಬೇಕು ಅಥವಾ ಬೇರೆ ಕಡೆಗೆ ಸ್ಥಳಾಂತರಿಸಲು ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮೂಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News