ನಗರದ ಜನತೆ ಹಳ್ಳಿಗಳಿಗೆ ಹೋಗದಿರಿ: ಸಿಎಂ ಯಡಿಯೂರಪ್ಪ ಮನವಿ
ಬೆಂಗಳೂರು, ಮಾ.22: ಕೊರೋನ ವೈರಸ್ ಸೋಂಕು ಹರಡುವ ಭೀತಿ ಇರುವುದರಿಂದ ನಗರದ ಜನ ಹಳ್ಳಿಗಳಿಗೆ ಹೋಗಬೇಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನೂ ಮುಂದೂಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ರವಿವಾರ ಮುಂಜಾನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೊರೋನಾ ತಡೆಯುವ ನಿಟ್ಟಿನಲ್ಲಿ ರಾಜ್ಯದ ಜನತೆ ಜನತಾ ಕರ್ಫ್ಯೂಗೆ ಬೆಂಬಲ ನೀಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಯ ವಿಶೇಷ ಸಮುಚ್ಛಯವನ್ನು ಕೊರೋನ ವೈರಸ್ ಸೋಂಕಿನ ಚಿಕಿತ್ಸೆಗೆ ಮೀಸಲಿಡಲಾಗಿದೆ ಎಂದು ತಿಳಿಸಿದರು.
ರಾಜ್ಯದ ಗಡಿಭಾಗವನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಬಾಲಬ್ರೂಯಿ ಅತಿಥಿ ಗೃಹದಲ್ಲಿ ಕೊರೋನ ತಡೆಯ ವಾರ್ ರೂಂ ತೆರೆಯಲಾಗಿದೆ. ಜನತೆ ಗಾಬರಿಯಾಗುವ ಅಗತ್ಯವಿಲ್ಲ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಎರಡು ತಿಂಗಳ ಪಡಿತರ ಒಟ್ಟಿಗೆ ವಿತರಿಸಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. ಎಸೆಸೆಲ್ಸಿ ಮತ್ತು ವಿವಿಧ ನೇಮಕಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿ ಎಲ್ಲ ಚುನಾವಣೆಗಳನ್ನು ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.