​ದೇಶದಲ್ಲಿ ಒಂದೇ ದಿನ 99 ಮಂದಿಗೆ ಕೊರೋನಾ ಸೋಂಕು ಪತ್ತೆ

Update: 2020-03-24 03:45 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಮವಾರ ಒಂದೇ ದಿನ ದೇಶಾದ್ಯಂತ 99 ಹೊಸ ಪ್ರಕರಣಗಳು ದೃಢಪಟ್ಟಿವೆ. ಒಂದೇ ದಿನದಲ್ಲಿ ಇಷ್ಟೊಂದು ಸಂಖ್ಯೆಯ ಪ್ರಕರಣ ಬೆಳಕಿಗೆ ಬಂದಿರುವುದು ಇದೇ ಮೊದಲು. ಭಾರತದಲ್ಲಿ ಒಂಬತ್ತು ಕೊರೋನಾ ಸಾವು ಸಂಭವಿಸಿದ್ದು, ರಾಜ್ಯಗಳಿಂದ ಬಂದ ವರದಿಗಳ ಪ್ರಕಾರ, ಒಟ್ಟು 498 ಮಂದಿಗೆ ಸೋಂಕು ಕಂಡುಬಂದಿದೆ. ಈ ಪೈಕಿ 478 ಪ್ರಕರಣಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ಕಳೆದ ಮೂರು ದಿನಗಳಲ್ಲೇ 246 ಹೊಸ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರ ಪೈಕಿ 40 ಮಂದಿ ವಿದೇಶೀಯರು ಎಂದು ಸರ್ಕಾರ ಸ್ಪಷ್ಟಪಡಿಸಿದೆ. 35 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ಹಿಮಾಚಲ ಪ್ರದೇಶದಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದು, ದೇಶದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದೆ. ಕೇರಳ (28) ಮತ್ತು ಮಹಾರಾಷ್ಟ್ರ (23) ದಲ್ಲಿ ಗರಿಷ್ಠ ಸಂಖ್ಯೆಯ ಸೋಂಕಿತರಿದ್ದಾರೆ.

ಗುಜರಾತ್‌ನಲ್ಲಿ 12 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಸೋಮವಾರ ಒಂದೇ ದಿನದಲ್ಲಿ 15 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಕೋವಿಡ್-19 ಪ್ರಕರಣಗಳ ಗಣಿತಾತ್ಮಕ ಮಾಡೆಲಿಂಗ್ ನಡೆಸುತ್ತಿದ್ದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಶೇಕಡ 62ರಷ್ಟು ಕೊರೋನಾ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಅಂದಾಜಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News