ಕೊರೋನ ಹಿನ್ನೆಲೆ: ದ.ಕ.ಜಿಲ್ಲಾ ಕಾಂಗ್ರೆಸ್ ನಿಯೋಗದಿಂದ ಡಿಸಿ ಭೇಟಿ

Update: 2020-03-26 15:46 GMT

ಮಂಗಳೂರು, ಮಾ..26: ಕೊರೋನ ವೈರಸ್ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿತು.

ಲಾಕ್‌ಡೌನ್ ಜಾರಿಗೆ ಜಿಲ್ಲಾಧಿಕಾರಿ ಕೈಗೊಂಡಿರುವ ಕ್ರಮಗಳನ್ನು ಪ್ರಶಂಸಿಸಿದ ನಿಯೋಗ ಸೋಂಕು ತಡೆಯಲು ಮತ್ತಷ್ಟು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿತು. ಲಾಕ್‌ಡೌನ್ ಅವಧಿಯಲ್ಲಿ ಆಹಾರ ಧಾನ್ಯ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಕೊರತೆ ಉದ್ಭವಿಸದಂತೆ ತಡೆಯಬೇಕು. ಈ ಅವಧಿಯಲ್ಲಿ ವ್ಯಾಪಾರಿಗಳು ದುಬಾರಿ ದರಕ್ಕೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡದಂತೆ ನಿರ್ಬಂಧ ಹೇರಬೇಕು. ಪಡಿತರ ವ್ಯವಸ್ಥೆಯಡಿ ಎಲ್ಲ ಕುಟುಂಬಗಳಿಗೂ ಆಹಾರ ಧಾನ್ಯ ಮತ್ತು ಇತರೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ನಿಯೋಗ ಆಗ್ರಹಿಸಿತು.

ಲಾಕ್‌ಡೌನ್ ಅಂಗವಾಗಿ ಜಾರಿಗೊಳಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕೊರೋನ ವೈರಸ್ ಸೋಂಕು ತಗುಲಿದವರು ಮತ್ತು ಶಂಕಿತ ರೋಗಿಗಳ ಚಿಕಿತ್ಸೆ ನೀಡಲು ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಳ್ಳುವಲ್ಲಿ ಆಗಿರುವ ಲೋಪ ಗಳನ್ನು ತುರ್ತಾಗಿ ಸರಿಪಡಿಸಬೇಕು ಎಂದು ಒತ್ತಾಯಿಸಿತು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News