×
Ad

ರೈತರ ಕಷ್ಟ ನಿವಾರಣೆಗೆ ಸರಕಾರ ಕಾರ್ಯಪ್ರವೃತ್ತವಾಗಲಿ: ಸಿದ್ದರಾಮಯ್ಯ

Update: 2020-03-31 20:44 IST

ಬೆಂಗಳೂರು, ಮಾ. 31: ಕಲಬುರಗಿಯ ರೈತನೊಬ್ಬ ತಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕಾರಿ ಬೆಳವಣಿಗೆ ಪರಿಸ್ಥಿತಿ ಕೈಮೀರುವ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಕಷ್ಟ ನಿವಾರಣೆಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ಒಂದೆಡೆ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಬಳಕೆದಾರರು ತರಕಾರಿ-ಹಣ್ಣುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು ಹಾಪ್ ಕಾಮ್ಸ್ ರೈತರಿಂದ ಖರೀದಿಸಿ ಬಳಕೆದಾರರಿಗೆ ಮಾರಾಟ ಮಾಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಗತ್ಯ ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂಬುದನ್ನು ನೆಪ ಮಾಡಿ ವ್ಯಾಪಾರಿಗಳು ತರಕಾರಿ, ಹಣ್ಣು ಮತ್ತು ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿಸಿ ಬಳಕೆದಾರರ ಸುಲಿಗೆ ನಡೆಸುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಕೇಂದ್ರ ಸರಕಾರ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ತೊಗರಿ ಪ್ರಮಾಣವನ್ನು 20 ಕ್ವಿಂಟಾಲ್‍ಗೆ ಹೆಚ್ಚಿಸಲು ನಿರಾಕರಿಸಿರುವುದು ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ ಏಳೆದಂತೆ ಆಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ತೊಗರಿಯನ್ನು 20 ಕ್ವಿಂಟಾಲ್‍ಗೆ ಹೆಚ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿರುವ ಮನವಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೇ ಬೆಂಬಲ ಬೆಲೆಗೆ ತೊಗರಿ ಖರೀದಿಸಿ ಪಡಿತರ ಅಂಗಡಿಗಳಲ್ಲಿ ವಿತರಿಸುವ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಇದೇ ವೇಳೆ ಒತ್ತಾಯ ಮಾಡಿದ್ದಾರೆ.

ರಾಜ್ಯದಲ್ಲಿ ಅಕ್ಕಿ ಗಿರಣಿಗಳನ್ನು ಮುಚ್ಚಿರುವ ಕಾರಣ ಪೂರೈಕೆ ಇಲ್ಲದೆ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರತೊಡಗಿದೆ. ಇದರಿಂದ ಅಕ್ರಮ ದಾಸ್ತಾನಿನ ಆರೋಪ ಕೇಳಿ ಬರುತ್ತಿದೆ. ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಅಕ್ಕಿ ಗಿರಣಿಗಳನ್ನು ತೆರೆಸಿ ಅಕ್ಕಿ ಪೂರೈಕೆಯನ್ನು ಸುಗಮಗೊಳಿಸಬೇಕು ಎಂದು ಸಿದ್ದರಾಮಯ್ಯ ಸರಕಾರಕ್ಕೆ ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News