ದಿಲ್ಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 27 ಮಂದಿ ಪತ್ತೆ: ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್

Update: 2020-04-02 16:36 GMT

ವಿಜಯಪುರ, ಎ.3: ಹೊಸದಿಲ್ಲಿಯ ನಿಝಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಗ್ ಜಮಾತ್‍ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ವಿಜಯಪುರ, ಬಸವನ ಬಾಗೇವಾಡಿ ಮತ್ತು ಮುದ್ದೇಬಿಹಾಳದ 17 ಜನರನ್ನು ಗುರುವಾರ ಪತ್ತೆ ಹೆಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎ.1ರಂದು 10 ಜನರನ್ನು ಪತ್ತೆ ಹಚ್ಚಲಾಗಿತ್ತು. ಸದ್ಯ 17 ಜನ ಸೇರಿ ಒಟ್ಟು 27 ಜನರನ್ನು ಇದುವರೆಗೆ ಪತ್ತೆ ಹಚ್ಚಲಾಗಿದೆ. ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಪತ್ತೆ ಕಾರ್ಯ ಮುಂದುವರಿದಿದ್ದು, ಈ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದರು.

ಇವರೆಲ್ಲರೂ ನಿಝಾಮುದ್ದೀನ್‍ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ವಿಜಯಪುರಕ್ಕೆ ಮರಳಿದ್ದಾರೆ. ಈಗಾಗಲೇ ಕ್ವಾರಂಟೈನ್ ಅವಧಿ ಮುಗಿದಿದೆ. ಆದರೂ ಸಹ ಎ.14ರವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇಡಲಾಗುವುದು ಹಾಗೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಇದುವರೆಗೆ ಕೊರೋನ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. ಜಿಲ್ಲೆಯ ಘೋಷಿತ ಮತ್ತು ಅಘೋಷಿತ ಕೊಳೆಗೇರಿಗಳಿರುವ ಸುಮಾರು 60 ಸಾವಿರ ಜನರಿಗೆ ಎ.3ರಿಂದ ಉಚಿತವಾಗಿ ಹಾಲು ವಿತರಣೆ ಮಾಡಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News