ಬಾಗಲಕೋಟೆಯಲ್ಲಿ ಮೊದಲ ಕೊರೋನ ಸೋಂಕು ದೃಢ

Update: 2020-04-03 10:52 GMT
ಸಾಂದರ್ಭಿಕ ಚಿತ್ರ

ಬಾಗಲಕೋಟೆ, ಎ.3: ಬಾಗಲಕೋಟೆಯಲ್ಲಿ 75 ವರ್ಷದ ಓರ್ವ ವೃದ್ಧನಿಗೆ ಕೊರೋನ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯು ವಾಸಿಸುವ ಸುತ್ತಮುತ್ತಲಿನ ವ್ಯಾಪ್ತಿಯ 0.5 ಕಿ.ಮೀ. ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರು ಮನೆ ಬಿಟ್ಟು ಹೊರಬರದಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮನವಿ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದು ಮೊದಲ ಪ್ರಕರಣವಾಗಿದ್ದು, ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗಿದ್ದು, ಅಲ್ಲಿರುವ ರೋಗಿಗಳನ್ನು ಹಳೆ ಬಾಗಲಕೋಟೆಯಲ್ಲಿರುವ 50 ಹಾಸಿಗೆಯ ಆಸ್ಪತ್ರೆ ಹಾಗೂ ಕುಮಾರೇಶ್ವರ ಆಸ್ಪತ್ರೆಗೆ ರವಾನಿಸಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.

ಸೋಂಕಿತ ವ್ಯಕ್ತಿಯನ್ನು ಕಳೆದ 15 ದಿನಗಳಲ್ಲಿ ಯಾರು ಸಂಪರ್ಕ ಹೊಂದಿದ್ದಾರೆಯೊ ಅವರನ್ನು ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತಿದೆ. ಅಲ್ಲದೆ, ಸೋಂಕಿತ ವ್ಯಕ್ತಿಯನ್ನು ಸಂಪರ್ಕಿಸಿದವರು ಸ್ವಯಂಪ್ರೇರಿತವಾಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ(94498 43160) ಅವರನ್ನು ಕೂಡಲೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಬೇಕಾದರೆ ಮನೆಯಿಂದ ಹೊರಗಡೆ ಯಾರು ಅನಾವಶ್ಯಕವಾಗಿ ಬರಕೂಡದು. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿರುವುದು ಕಂಡು ಬಂದಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News