ಎರಡು ತಿಂಗಳ ಪಿಂಚಣಿ ಮುಂಗಡವಾಗಿ ನೀಡಲು ಕ್ರಮ: ಸಿಎಂ ಯಡಿಯೂರಪ್ಪ

Update: 2020-04-03 16:44 GMT

ಬೆಂಗಳೂರು, ಎ. 3: ಸಾಮಾಜಿಕ ಭದ್ರತಾ ಯೋಜನೆಯಡಿ ಎರಡು ತಿಂಗಳ ಪಿಂಚಣಿಯನ್ನು ಮುಂಗಡವಾಗಿ ನೀಡಲಾಗುತ್ತಿದೆ. ಕಟ್ಟಡ ಕಾರ್ಮಿಕರಿಗೆ ನೀಡುವ ನೆರವಿನ ಮೊತ್ತವನ್ನು ಎರಡು ಸಾವಿರ ರೂ.ಗಳಿಗೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರಿನ ಸಚಿವರೊಂದಿಗೆ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಅವರು, ರಾಜ್ಯದಲ್ಲಿ ವರದಿಯಾದ ಕೊರೋನ ವೈರಸ್ ಸೋಂಕಿನ ಪ್ರಕರಣದಲ್ಲಿ ಅರ್ಧದಷ್ಟು ಬೆಂಗಳೂರಿನಲ್ಲಿವೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವ ಬಗ್ಗೆ ನಗರದ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ನಾಳೆ ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಎಲ್ಲ ಶಾಸಕರೊಂದಿಗೆ ಸಭೆ ಕರೆಯಲು ನಿರ್ಧರಿಸಲಾಗಿದೆ. ನಗರದ ಶಾಸಕರು, ಪಾಲಿಕೆ ಸದಸ್ಯರ ಸಹಕಾರದೊಂದಿಗೆ ಬಡವರು, ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಬಿಡುಗಡೆ ಆಗುವ ಪಡಿತರ ವಿತರಣೆ ಸಮರ್ಪಕವಾಗಿ ಆಗುವಂತೆ ಖಾತರಿ ಪಡಿಸಿಕೊಳ್ಳುವಂತೆ ಸಚಿವರಿಗೆ ನಿರ್ದೇಶನ ನೀಡಲಾಗಿದೆ ಎಂದು ಬಿಎಸ್‍ವೈ ತಿಳಿಸಿದರು.

ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಇರುವ ಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು ಮತ್ತಿತರ ಮೂಲಭೂತ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹೆಚ್ಚಿನ ನೆರವು ಪಡೆಯಲು ನಗರದ ದಾನಿಗಳ ಮನವೋಲಿಸಲು ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ವಿವರಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News