ಕೊರೋನ ವಿಚಾರದಲ್ಲಿ ಮುಸ್ಲಿಮರ ವಿರುದ್ಧ ಅಪಪ್ರಚಾರ: ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ದೇವೇಗೌಡ ಪತ್ರ

Update: 2020-04-06 13:15 GMT

ಬೆಂಗಳೂರು, ಎ.6: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸರಕಾರದ ಕರ್ತವ್ಯವೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಕೊರೋನ ಸೋಂಕನ್ನು ಒಂದು ಸಮುದಾಯದ ತಲೆಗೆ ಕಟ್ಟುವಂತಹ ಕೆಲಸಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಇದೆಲ್ಲವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಕಿಡಿಗೇಡಿಗಳು ಮಾಡುತ್ತಿರುವ ತಪ್ಪಿನಿಂದಾಗಿ ಕೊರೋನ ಸೋಂಕು ಹರಡಲು ಇಡೀ ಸಮುದಾಯವೇ ಕಾರಣವೆಂಬ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಿರುವುದು ದುರದೃಷ್ಟಕರ. ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಕೊರೋನ ಸೋಂಕಿನ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತಿರುವ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು, ಪ್ಯಾರಾಮೆಡಿಕಲ್ ಸಿಬ್ಬಂದಿಯವರ ಸೇವೆ ಶ್ಲಾಘನೀಯ. ಅವರು ನೀಡುತ್ತಿರುವ ವೈದ್ಯಕೀಯ ಸೇವೆ ಅನನ್ಯ. ಇವರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಯ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯ ರೈತರ ಜಮೀನುಗಳಿಗೆ ತೆರಳಿ, ನಗದು ರೂಪದಲ್ಲೇ ಹಣವನ್ನು ಪಾವತಿಸಿ ರೈತರು ಬೆಳೆದಿರುವ ಹಣ್ಣು, ಹಂಪಲು ಮತ್ತು ತರಕಾರಿ ಕೊಳ್ಳಲು ಜಿಲ್ಲಾ ಆಡಳಿತದ ಮೂಲಕ ವ್ಯವಸ್ಥೆ ಮಾಡಬೇಕು.

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News