ಹಾಟ್‍ಸ್ಪಾಟ್‍ಗಳಲ್ಲಿ ಲಾಕ್‍ಡೌನ್ ಮುಂದುವರೆಸಬೇಕು: ತಜ್ಞರ ಸಮಿತಿ ಶಿಫಾರಸ್ಸು

Update: 2020-04-08 18:23 GMT

ಬೆಂಗಳೂರು, ಎ.8: ಲಾಕ್‍ಡೌನ್ ಅನ್ನು ಹಂತ ಹಂತವಾಗಿ ಸಡಿಲಿಸುವ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡುವಂತೆ ಡಾ.ದೇವಿ ಶೆಟ್ಟಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಜ್ಞರ ಸಮಿತಿಯು ರಾಜ್ಯ ಸರಕಾರಕ್ಕೆ ತನ್ನ ಶಿಫಾರಸ್ಸುಗಳನ್ನು ಒಳಗೊಂಡ ವರದಿ ಸಲ್ಲಿಸಿದ್ದು, ಹಾಟ್‍ಸ್ಪಾಟ್‍ಗಳಲ್ಲಿ ಲಾಕ್‍ಡೌನ್ ಮುಂದುವರೆಸುವಂತೆ ಶಿಫಾರಸ್ಸು ಮಾಡಿದೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ ಸಮಿತಿಯು, ಮುಂದಿನ ಆರು ತಿಂಗಳವರೆಗೆ ಹೆಚ್ಚಿನ ಎಚ್ಚರ ವಹಿಸುವ ಅಗ್ಯವಿದ್ದು, ಹಾಟ್‍ಸ್ಪಾಟ್‍ಗಳಲ್ಲಿ ಲಾಕ್‍ಡೌನ್ ಮುಂದುವರೆಸುವಂತೆ ಶಿಫಾರಸ್ಸು ಮಾಡಿದೆ.

ಲಾಕ್‍ಡೌನ್ ಘೋಷಣೆಯಾದ ನಂತರ ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಸ್ಥಳೀಯವಾಗಿ ಲಾಕ್‍ಡೌನ್ ಮಾಡಬೇಕು. ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು. ಶಾಲೆ, ಕಾಲೇಜುಗಳನ್ನು ಮೇ 31ರವರೆಗೆ ಮುಚ್ಚಬೇಕು. ಆನ್‍ಲೈನ್ ತರಗತಿಗಳಿಗೆ ಉತ್ತೇಜನ ನೀಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ಹವಾನಿಯಂತ್ರಿತ ವ್ಯವಸ್ಥೆ(ಎಸಿ) ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು. ಐಟಿ, ಬಿಟಿ ಉದ್ಯಮಗಳು, ಅತ್ಯಾವಶ್ಯಕ ಸೇವೆ ಒದಗಿಸುವ ಸರಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು ಎಂದು ಸಮಿತಿಯು ಶಿಫಾರಸ್ಸು ಮಾಡಿದೆ.

ಅಂತರ್ ರಾಜ್ಯ ಗಡಿಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶ ನೀಡಬೇಕು. ಸ್ಥಳೀಯ ಅಂಗಡಿಗಳು ಹೆಚ್ಚಿನ ಅವಧಿಗೆ ತೆರೆದಿಡುವ ಮೂಲಕ ಜನ ಸಂದಣಿಯಾಗದಂತೆ ಎಚ್ಚರ ವಹಿಸಬೇಕು. ಅಂತರರಾಜ್ಯ ರೈಲು ಸೇವೆ, ವಿಮಾನ ಸೇವೆಗಳನ್ನು ಸದ್ಯ ಪ್ರಾರಂಭಿಸಬಾರದು ಎಂದು ಶಿಫಾರಸ್ಸು ಮಾಡಲಾಗಿದೆ.

ಕೋವಿಡ್ ಪ್ರಕರಣಗಳು ವರದಿಯಾದಾಗ ಚಿಕಿತ್ಸೆಗೆ ವೈದ್ಯರು, ದಾದಿಯರು, ಇತರೆ ಅರೆ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸುರಕ್ಷಾ ಸಾಮಗ್ರಿಗಳನ್ನು ಒದಗಿಸಬೇಕು. ಎಪ್ರಿಲ್ 12ರ ನಂತರ ರಾಪಿಡ್ ಟೆಸ್ಟ್ ಕಿಟ್‍ಗಳ ಪೂರೈಕೆಯಾಗಲಿದ್ದು, ಕ್ವಾರಂಟೈನ್ ಮತ್ತು ಪರೀಕ್ಷಾ ಪ್ರಕ್ರಿಯೆಗಳು ಇನ್ನಷ್ಟು ಪರಿಣಾಮಕಾರಿಯಾಗಲಿವೆ ಎಂದು ಸಮಿತಿಯ ವರದಿ ತಿಳಿಸಿದೆ.

ನಾನ್ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಸಾಧ್ಯವಾದಷ್ಟು ಟೆಲಿಕನ್ಸಲ್ಟೇಷನ್ ನಡೆಸಬೇಕು. ಜನರ ಅನಾವಶ್ಯಕ ಓಡಾಟಕ್ಕೆ ಕಡಿವಾಣ ಹಾಕಬೇಕು. ಎಪ್ರಿಲ್ 30ರವರೆಗೆ ಎಸಿ ಬಸ್, ಮೆಟ್ರೋ ಸೇವೆ ಬೇಡ. ಖಾಸಗಿ ವಾಹನಗಳ ಓಡಾಟಕ್ಕೆ ಸಮ-ಬೆಸ ಸಂಖ್ಯೆಯ ಸೂತ್ರವನ್ನು ಅನುಸರಿಸಬೇಕು ಎಂದು ಮುಂದಿನ 15 ದಿನಗಳ ಅವಧಿಗೆ ಸಮಿತಿಯು ಈ ಶಿಫಾರಸ್ಸುಗಳನ್ನು ಮಾಡಿದೆ.

ಕೇಂದ್ರ ಸರಕಾರದ ಮಾರ್ಗಸೂಚಿ ಹಾಗೂ ಸಮಿತಿಯ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಈ ತಜ್ಞರ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್, ರಾಜೀವ್‍ಗಾಂಧಿ ಆಸ್ಪತ್ರೆಯ ಡಾ.ನಾಗರಾಜ್, ಡಾ.ರವಿ ಹಾಗೂ ಡಾ.ಸುದರ್ಶನ್ ಇದ್ದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News