ಲಾಕ್‍ಡೌನ್ ವಿಸ್ತರಿಸುವ ಬಗ್ಗೆ ಪ್ರಧಾನಿ ಜತೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಯಡಿಯೂರಪ್ಪ

Update: 2020-04-09 12:17 GMT

ಬೆಂಗಳೂರು, ಎ. 9: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಎ.14ರ ಬಳಿಕ ಇನ್ನೂ ಹದಿನೈದು ದಿನಗಳ ಕಾಲ ಲಾಕ್‍ಡೌನ್ ವಿಸ್ತರಿಸಬೇಕೆಂದು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳ ಒಕ್ಕೂರಲ ಒತ್ತಾಯವಾಗಿದೆ. ಈ ಸಂಬಂಧ ನಾಳೆ(ಎ.10) ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಪ್ರಕಟಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಹೇರಿರುವ ಲಾಕ್‍ಡೌನ್ ಅನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ಉಲ್ಲಂಘನೆ ಮಾಡಿ ಸಂಚಾರ ಮಾಡುತ್ತಿದ್ದ 10 ಸಾವಿರಕ್ಕೂ ಅಧಿಕ ಮಂದಿಯ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನು ಮುಂದುವರಿಸಲಿದ್ದು, ಸಾರ್ವಜನಿಕರು ಲಾಕ್‍ಡೌನ್ ಪಾಲಿಸದಿದ್ದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಯಡಿಯೂರಪ್ಪ ಇದೇ ವೇಳೆ ಎಚ್ಚರಿಕೆ ನೀಡಿದರು.

ರೈತರಿಗೆ ಪರಿಹಾರ: ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು, ಕೊಪ್ಪಳ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನಿನ್ನೆ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಭತ್ತ ಸೇರಿದಂತೆ ಇನ್ನಿತರ ಬೆಳೆ ನಷ್ಟವಾಗಿದ್ದು, ಈ ಬಗ್ಗೆ ಕೂಡಲೇ ವರದಿ ನೀಡಲು ಕೃಷಿ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ವರದಿ ಬಂದ ಕೂಡಲೇ ಆ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಗದೆ ನಷ್ಟಕ್ಕೆ ಒಳಗಾಗಿರುವ ಹೂ ಬೆಳೆಗಾರರಿಗೂ ಪರಿಹಾರ ನೀಡಲಾಗುವುದು ಎಂದ ಅವರು, ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದು, ರೈತರಿಗೆ ಯಾವುದೇ ತೊಂದರೆ ಆಗದಂತೆ ಸರಕಾರ ಕ್ರಮ ವಹಿಸಲಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಯಾರೊಬ್ಬರು ಹಸಿವಿನಿಂದ ಇರಬಾರದೆಂದು ಸರಕಾರ ಎಲ್ಲ ಕಡೆಗಳಲ್ಲಿ ವಲಸೆ ಮತ್ತು ಕೂಲಿ ಕಾಮಿಕರು ಸೇರಿದಂತೆ ಬಡವರಿಗೆ ಅಗತ್ಯ ಊಟದ ವ್ಯವಸ್ಥೆ ಕಲ್ಪಿಸಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಈ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದ ಅವರು, ಪಡಿತರ ಕಾರ್ಡ್‍ದಾರರಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಿದ್ದು, ಕಾರ್ಡ್ ಇಲ್ಲದ ಬಡವರಿಗೂ ಎರಡು ತಾತ್ಕಾಲಿಕ ಪಡಿತರ ವಿತರಣೆಗೆ ಸೂಚಿಸಲಾಗಿದೆ ಎಂದರು.

ಕೆಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರಿಲ್ಲ. ಆ ಜಿಲ್ಲೆಗಳಿಗೆ ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುವುದು. ಅಲ್ಲದೆ, ಕೊರೋನ ವೈರಸ್ ಸೋಂಕು ನಿಯಂತ್ರಣ, ಬಡವರಿಗೆ ಪಡಿತರ ಪದಾರ್ಥಗಳ ವಿತರಣೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News