ಬೆಳೆ ಸಮೀಕ್ಷೆ ನಡೆಸಿ, ಮೂರು ದಿನದಲ್ಲಿ ಪರಿಹಾರ ನೀಡಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ

Update: 2020-04-11 11:03 GMT

ಬೆಂಗಳೂರು, ಎ. 11: 'ಲಾಕ್‍ಡೌನ್ ಮೂರನೆ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ ಮಾರಾಟವಾಗದೆ ಜಮೀನಿನಲ್ಲೆ ಕೊಳೆಯುತ್ತಿರುವುದನ್ನು ಕಂಡು ರೈತರು 'ಹೆತ್ತ ಮಕ್ಕಳು' ಅಕಾಲ ಮರಣಕ್ಕೀಡಾದಂತೆ ಸಂಕಟಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸುಲು ಪ್ರತಿ ಗ್ರಾಮಗಳಲ್ಲಿ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನು ಸಮೀಕ್ಷೆ ಮಾಡಿ ಮೂರು ದಿನಗಳಲ್ಲಿ ಪರಿಹಾರ ನೀಡಲಿ' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, "ರಾಜ್ಯ ಸರಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು" ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬೂಜ, ಮಾವು ಸೇರಿದಂತೆ ಹೂವು-ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಟ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಸರಕಾರ ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬುದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೈಗೆ ಬಂದ ಬೆಳೆಯು ಮಾರಾಟವಾಗದೆ ಮುಂದೇನು? ಎಂದು ಚಿಂತಾಕ್ರಾಂತರಾಗಿರುವ ರೈತರಿಗೆ ಸಹಾಯ ಹಸ್ತಚಾಚಲು ಆಮೆವೇಗದಲ್ಲಿರುವ ಸರಕಾರ ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆ ಉಂಟಾಗದಂತೆ ಎಚ್ಚರ ವಹಿಸುತ್ತಿರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ರೈತರ ಉತ್ಪನ್ನಗಳನ್ನು ಸರಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮ ಕೈಗೊಳ್ಳಬೇಕು. ಲಾಕ್‍ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸುತ್ತೇನೆ'

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News