ದಿಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 101 ಮಂದಿಯ ವರದಿ ನೆಗೆಟಿವ್: ಚಾಮರಾಜನಗರ ಜಿಲ್ಲಾಧಿಕಾರಿ

Update: 2020-04-12 16:18 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ, ಎ.12: ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ ನೆಗೆಟಿವ್ ವರದಿ ಬಂದಿರುವ 101 ಜನರನ್ನು ಕ್ವಾರೆಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. ಉಳಿದ ಇಬ್ಬರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

ಕೊರೋನ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ಮಂದಿ 14 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಈ 52 ಜನರ ಪೈಕಿ ಮೂರು ಜನರು ಪಾಸಿಟಿವ್ ವ್ಯಕ್ತಿಯ ಸಂಪರ್ಕದಲ್ಲಿದ್ದರೆಂದು ತಿಳಿದುಬಂದಿರುವುದರಿಂದ ಅವರನ್ನು ಪುನ: ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಇಂದು ಈ ಮೂವರ ಹಾಗೂ ಮಳವಳ್ಳಿ ಪಾಸಿಟಿವ್ ಪ್ರಕರಣದ ಜೊತೆ ಸಂಪರ್ಕ ಹೊಂದಿದ್ದ ಒಬ್ಬ ವ್ಯಕ್ತಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಸದರಿ ವ್ಯಕ್ತಿಯನ್ನು ಸಹ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಒಟ್ಟಾರೆ ಇಂದು ನಾಲ್ಕು ಜನರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ವಿದೇಶಗಳಿಂದ ಪ್ರಯಾಣಿಸಿ ಜಿಲ್ಲೆಗೆ ಇದುವರೆಗೆ ಒಟ್ಟು 43 ಜನರು ಬಂದಿದ್ದು, ಇವರೆಲ್ಲರೂ ಸಹ 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News