×
Ad

ಅನುಮತಿ ಇಲ್ಲದೇ ಡ್ರೋನ್ ಕ್ಯಾಮರಾ ಬಳಸಿದಲ್ಲಿ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ

Update: 2020-04-13 20:28 IST

ಉಡುಪಿ, ಎ.13: ನೋವೆಲ್ ಕೊರೋನ ವೈರಸ್ (ಕೋವಿಡ್-2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ರಾಜ್ಯಾದ್ಯಂತ ಲಾಕ್‌ಡೌನ್ ಘೋಸಿದ್ದು, ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ ನಾಗರಿಕರ ಸಂಚಾರ ವನ್ನು ನಿರ್ಬಂಧಿಸಿ ಆದೇಶವನ್ನು ಹೊರಡಿಸಲಾಗಿದೆ.

ಈ ನಡುವೆ ಕೆಲವೊಂದು ವ್ಯಕ್ತಿಗಳು/ಸಂಸ್ಥೆಗಳು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೇ ಡ್ರೋನ್ ಕ್ಯಾಮರಾಗಳನ್ನು ಬಳಸುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಾಕಷ್ಟು ದೂರುಗಳು ಸ್ವೀಕೃತವಾಗಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣಕ್ಕೆ ಆಸ್ಪದ ನೀಡಿದಂತಾಗುತ್ತದೆ. ಡ್ರೋನ್ ಕ್ಯಾಮರಾಗಳನ್ನು ಉಪಯೋಗಿಸುವ ಬಗ್ಗೆ ಜಿಲ್ಲಾಡಳಿತದಿಂದ ಪೂರ್ವಾನುಮತಿಯನ್ನು ಕಡ್ಡಾಯ ವಾಗಿ ಪಡೆಯಬೇಕಾಗಿದೆ.

ಅಲ್ಲದೇ ಡ್ರೋನ್ ಕ್ಯಾಮರಾಗಳನ್ನು ಹೊಂದಿರುವವರು ಜಿಲ್ಲಾ ಪೋಲೀಸ್ ಅಧೀಕ್ಷಕರ ಕಚೇರಿಯಲ್ಲಿ ನೊಂದಣಿ ಮಾಡಿಸಬೇಕಾಗಿದೆ. ಆದುದರಿಂದ ಡ್ರೋನ್ ಕ್ಯಾಮರಾಗಳನ್ನು ಹೊಂದಿರುವವರು ಅವುಗಳ ಬಗ್ಗೆ ಜಿಲ್ಲಾ ಪೋಲೀಸ್ ಅಧೀಕ್ಷಕರ ಕಚೇರಿಯಲ್ಲಿ ನೊಂದಣಿ ಮಾಡಿಸಿ ಜಿಲ್ಲಾಡಳಿತದಿಂದ ಅನುಮತಿ ಪಡೆದು ಅವಶ್ಯಕತೆಗನುಸಾರ ಅವುಗಳನ್ನು ಬಳಸುವಂತೆ ತಿಳಿಸಲಾಗಿದೆ.

ಅನುಮತಿ ಪಡೆಯದೇ ಡ್ರೋನ್ ಕ್ಯಾಮರಾಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು, ನಿಯಮಾನುಸಾರ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News