×
Ad

ಉಡುಪಿಯಲ್ಲಿ ಕೊರೋನ ನಿಯಂತ್ರಣ ಸಂಬಂಧ ಕೇಂದ್ರ ಸರಕಾರದಿಂದ ಪ್ರಶಂಸೆ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-04-14 20:15 IST

ಉಡುಪಿ, ಎ.14: ನೋವೆಲ್ ಕೊರೋನ ವೈರಸ್ (ಕೋವಿಡ್-19) ವ್ಯಾಪಿಸದಂತೆ ಉಡುಪಿ ಜಿಲ್ಲಾಡಳಿತ ಕೈಗೊಂಡ ತ್ವರಿತ ಉಪಕ್ರಮಗಳಿಗೆ ಹಾಗೂ ಕೊರೋನಕ್ಕೆ ಉಡುಪಿ ಜಿಲ್ಲೆಯಲ್ಲಿ ಹಾಕಿರುವ ಕಡಿವಾಣಕ್ಕೆ ಕೇಂದ್ರ ಸರಕಾರದಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. 

ಉಡುಪಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ನಿಯಂತ್ರಣದ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ, ಮಾ.29ರ ಬಳಿಕ ಕಳೆದ ಎರಡು ವಾರಗಳಿಗೂ ಅಧಿಕ ಸಮಯದಿಂದ ಯಾವುದೇ ಹೊಸ ಕೊರೋನ ಪ್ರಕರಣ ಕಂಡುಬಂದಿಲ್ಲ. ಈ ಬಗ್ಗೆ ಕೇಂದ್ರ ಸರಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದವರು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ಕೊನೆಯ ಕೊರೋನ ಪ್ರಕರಣ ಪತ್ತೆಯಾಗಿದ್ದು, ನಂತರದ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಂಡ ಸಮರ್ಥ ನಿರ್ಧಾರಗಳಿಂದ, ಜಿಲ್ಲೆಯಲ್ಲಿ ಕೊರೋನ ಸೋಂಕು ಹೊಸದಾಗಿ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಕೊರೋನ ಸೋಂಕಿತರು ಕಂಡು ಬಂದ ಕೂಡಲೇ, ಅವರೊಂದಿಗೆ ಸಂಪರ್ಕದಲ್ಲಿದ್ದವರನ್ನು ಗುರುತಿಸಿ. ಕ್ವಾರಂಟೈನ್‌ಗೆ ಒಳಪಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಕಾರಣ, ಸೋಂಕು ಹರಡುವುದನ್ನು ತಡೆಯುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ ಎಂದು ಕೇಂದ್ರ ಪ್ರಶಂಸಿಸಿದೆ ಎಂದರು.

ಅಲ್ಲದೇ ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದು, ಸರಕು ಸಾಗಾಣಿಕೆ ಮತ್ತು ತುರ್ತು ವೈದ್ಯಕೀಯ ಕಾರಣ ಹೊರತು ಪಡಿಸಿ ಇತರೆ ಯಾವುದೇ ಉದ್ದೇಶಕ್ಕೆ ಜಿಲ್ಲೆಯೊಳಗೆ ಪ್ರವೇಶ ನೀಡಿಲ್ಲ. ಹೊರಜಿಲ್ಲೆಗಳಿಂದ ಸಹ ಸೋಂಕು ಹರಡುವುದನ್ನು ತಪ್ಪಿಸಲಾಗಿದೆ. ಜಿಲ್ಲೆಯೊಳಗೆ ದಿನನಿತ್ಯದ ವಸ್ತುಗಳ ಖರೀದಿಗೆ ಸಾರ್ವಜನಿಕರಿಗೆ ಸಮಯ ನಿಗದಿ ಪಡಿಸಲಾಗಿದ್ದು, ಖರೀದಿ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಅನಗತ್ಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿನ ಕಾರ್ಮಿಕರಿಗೆ, ನಿರಾಶ್ರಿತರಿಗೆ ಹಾಗೂ ನಿರ್ಗತಿಕರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅವರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿರು ವುದು ಈ ಸಾದನೆಗೆ ಕಾರಣವಾಗಿದೆ ಎಂದು ಅವರು ವಿವರಿಸಿದರು.

ಆದುದರಿಂದ ಲಾಕ್‌ಡೌನ್ ಅವಧಿ ಮುಗಿಯುವವರೆಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವ ಮೂಲಕ ಉಡುಪಿ ಜಿಲ್ಲೆ ಕೊರೋನ ಮುಕ್ತವಾಗಲು ಎಲ್ಲರೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News