ಕಚೇರಿ ಕರ್ತವ್ಯಕ್ಕೆ ಹಾಜರಾಗುವವರಿಗೆ ಪಾಸ್ ಆವಶ್ಯಕತೆ ಇಲ್ಲ: ಚಿಕ್ಕಮಗಳೂರು ಜಿಲ್ಲಾಧಿಕಾರಿ

Update: 2020-04-16 12:37 GMT

ಚಿಕ್ಕಮಗಳೂರು, ಎ.16: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸರಕಾರ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ರಾಜ್ಯ ಸರಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಸಂಬಂಧದ ಸಂಚಾರಕ್ಕೆ ಯಾವುದೇ ಪ್ರತ್ಯೇಕ ಪಾಸ್‍ಗಳ ಆವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್  ಜಾರಿಗೊಳಿಸಲಾಗಿದೆ. ರಾಜ್ಯ ಮಟ್ಟದ ಕಚೇರಿಗಳಲ್ಲಿ ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಸೇವೆಯನ್ನು ಒದಗಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಾರಿಗೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಖಜಾನೆಗಳು ಸೇರಿದಂತೆ ಆರ್ಥಿಕ ಇಲಾಖೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಗಳು ಹಾಗೂ ಇವುಗಳನ್ನು ಹೊರತು ಪಡಿಸಿ ಉಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಹಾಜರಾಗಲು ಸರಕಾರ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಸರಕಾರಿ ಅಧಿಕಾರಿಗಳು, ನೌಕರರು ಕರ್ತವ್ಯಕ್ಕೆ ಹಾಜರಾಗಲು ಜಿಲ್ಲಾಡಳಿತ ಅನುವು ಮಾಡಿಕೊಡಲಾಗಿದೆ. ಈ ಸಂಬಂಧ ಕಚೇರಿಗಳಿಗೆ ಹಾಜರಾಗುವವರಿಗೆ ಯಾವುದೇ ಪಾಸ್‍ಗಳ ಅಗತ್ಯ ಇರುವುದಿಲ್ಲ ಎಂದು ತಿಳಿಸಿರುವ ಜಿಲ್ಲಾಧಿಕಾರಿ, ಕಚೇರಿ ಕಾರ್ಯ ಹೊರತು ಪಡಿಸಿ ಬೇರೆ ಉದ್ದೇಶಕ್ಕೆ ಓಡಾಡಲು ಅವಕಾಶವಿರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News