×
Ad

ಕೊರೋನ, ಲಾಕ್‍ಡೌನ್ ವಿಚಾರ: ಎ.20ಕ್ಕೆ ಸಚಿವ ಸಂಪುಟ ಸಭೆ

Update: 2020-04-16 23:50 IST

ಬೆಂಗಳೂರು, ಎ. 16: ರಾಜ್ಯದಲ್ಲಿ ಮಾರಕ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ತಡೆಗಟ್ಟುವುದು ಹಾಗೂ ಲಾಕ್‍ಡೌನ್ ಅನುಷ್ಠಾನ ಸೇರಿದಂತೆ ಇನ್ನಿತರ ವಿಚಾರಗಳ ಚರ್ಚೆ ಸಂಬಂಧ ಎ.20ರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ಏಳೆಂಟು ಜಿಲ್ಲೆಗಳಲ್ಲಿ ಕೊರೋನ ಸೋಂಕು ನಿಯಂತ್ರಣಕ್ಕೆ ಸಿಗದ ರೀತಿಯಲ್ಲಿ ಏರು ಗತಿಯಲ್ಲಿ ಸಾಗುತ್ತಿದ್ದು, ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲದೆ, ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆಯದ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಜತೆಗೆ ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭೀಕರ ಸ್ವರೂಪದ ಬರ ಪರಿಸ್ಥಿತಿ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಅಲ್ಲದೆ, ಕೊರೋನ ಸೋಂಕಿತರಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಸಡಿಲಿಸುವುದು ಸೇರಿದಂತೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಲಿದ್ದು, ಸಚಿವ ಸಂಪುಟ ಸಹೊದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಎ.20ರ ಬಳಿಕ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದು, ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News