ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ನಿಂದನೆ; ಸುರೇಶ್ ರಾವ್ ವಿರುದ್ಧ ಪ್ರಕರಣ ದಾಖಲು

Update: 2020-04-17 11:30 GMT

ಮಂಗಳೂರು, ಎ.17: ಲಾಕ್‌ಡೌನ್ ಉಲ್ಲಂಘಿಸಿ ಸಂಚರಿಸುತ್ತಿದ್ದ ಕಾರೊಂದನ್ನು ಪೊಲೀಸರು ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಲ್‌ಬಾಗ್ ಸಮೀಪ ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಪಿವಿಎಸ್ ಬಳಿಯ ನಿವಾಸಿ ಸುರೇಶ್ ರಾವ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಗುರುವಾರ ಲಾಲ್‌ಬಾಗ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸರು ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಅದೇರೀತಿ ಸಂಜೆ 6 ಗಂಟೆ ಸುಮಾರಿಗೆ ಸುರೇಶ್ ರಾವ್ ಎಂಬಾತ ಚಲಾಯಿಸುತ್ತಿದ್ದ ಕಾರನ್ನು ತಡೆದ ಪೊಲೀಸರು ಅನಗತ್ಯವಾಗಿ ಸಂಚರಿಸುತ್ತಿರುವ ಬಗ್ಗೆ ಪ್ರಶ್ನಿಸಿ, ಪಾಸ್ ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಆರೋಪಿ ಉಡಾಫೆಯಿಂದ ವರ್ತಿಸಿದ್ದಲ್ಲದೆ, ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಯ ಕಾರನ್ನು ವಶಕ್ಕೆ ಪಡೆದಿರುವ ಉರ್ವಾ ಠಾಣಾ ಪೊಲೀಸರು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ನ್ಯಾಯಾಲಯಕ್ಕೆ ಶರಣು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿ ಸುರೇಶ್ ರಾವ್ ಶುಕ್ರವಾರ 3ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶರಣಾಗಿದ್ದು ತನಗೆ ಅಲ್ ಝೈಮರ್ ಕಾಯಿಲೆ ಇರುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News