×
Ad

ಕೊರೋನ ಪತ್ತೆ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೆ ಸ್ಥಾನ: ಸಿಎಂ ಯಡಿಯೂರಪ್ಪ

Update: 2020-04-17 17:29 IST

ಬೆಂಗಳೂರು, ಎ. 17: ಕೊರೋನ ವೈರಸ್ ಸೋಂಕಿತರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಎರಡನೆ ಸ್ಥಾನದಲ್ಲಿದೆ. ಸರಾಸರಿ 43.56 ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ. ಮೊದಲ ಸ್ಥಾನದಲ್ಲಿರುವ ಕೇರಳದಲ್ಲಿ 44.16 ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಈವರೆಗೂ 17 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದೆ. ಪ್ರಾರಂಭದಲ್ಲಿ ದಿನಕ್ಕೆ 500 ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ದಿನಕ್ಕೆ 2 ಸಾವಿರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ವೈದ್ಯರು ಆರಂಭದಲ್ಲೇ ಪ್ರಕರಣಗಳ ವರದಿ ಮಾಡಿದರೆ ಚಿಕಿತ್ಸೆ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ಸಹಕಾರಿ. ಇಂದು 38 ಪ್ರಕರಣಗಳು ವರದಿಯಾಗಿದ್ದು, ಚಿಕಿತ್ಸೆ ವಿಧಿ-ವಿಧಾನಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೋಗಿಗಳು ರೋಗ ಲಕ್ಷಣ ಕಂಡುಬಂದ ಮೇಲೆಯೂ ಸರಾಸರಿ ನಾಲ್ಕು ದಿನದ ನಂತರ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಯಡಿಯೂರಪ್ಪ ವಿವರಣೆ ನೀಡಿದರು.

ಕೊರೋನ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಜನರು ರೋಗದ ಲಕ್ಷಣ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕೆಂದು ನಾನು ಮನವಿ ಮಾಡುವೆ ಎಂದ ಅವರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಹಾಗೂ ಅವರಿಗೆ ಕೆಲವು ವಿಶೇಷ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕೋವಿಡ್-19 ಚಿಕಿತ್ಸೆಗೆ ಸೂಕ್ತ ಮಾರ್ಗಸೂಚಿಯನ್ನು ಅನುಸರಿಸಲು ನಿರ್ಧರಿಸಿದ್ದು, ಪ್ಲಾಸ್ಮಾ ಚಿಕಿತ್ಸೆಗೆ ಐಸಿಎಂಆರ್ ಅನುಮತಿಗಾಗಿ ಕಾಯಲಾಗುತ್ತಿದೆ ಎಂದ ಅವರು, ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇದಕ್ಕಾಗಿ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸಲಾಗುತ್ತಿದೆ. ಯಾವುದೇ ಪ್ರಕರಣ ವರದಿಯಾಗದೆ ಇರುವ ಜಿಲ್ಲೆಗಳಲ್ಲಿಯೂ ಈ ರೋಗದ ಲಕ್ಷಣಗಳಿರುವ ವ್ಯಕ್ತಿಗಳ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎಂದ ಯಡಿಯೂರಪ್ಪ, ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ ಹೊರಡಿಸಿದೆ ಎಂದರು.

ಈ ನಿಟ್ಟಿನಲ್ಲಿ ಎಪ್ರಿಲ್ ಅಂತ್ಯದೊಳಗೆ ಇನ್ನೂ 10 ಪ್ರಯೋಗಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಲಾಕ್‍ಡೌನ್ ಸಡಿಲಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು.

ವಿವಿಧ ಕಂಪೆನಿಗಳಲ್ಲಿ ಲಾಕ್​ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತಿತರ ಸರಳ ಪರೀಕ್ಷಾ ಪರಿಕರಗಳ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗದ ಲಕ್ಷಣವಿದೆಯೇ ಎಂದು ಪ್ರತಿನಿತ್ಯ ಪರೀಕ್ಷೆ ಮಾಡುವ ಅಗತ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ವಿವರವಾದ ಮಾರ್ಗಸೂಚಿ ಸಿದ್ಧಪಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಸೇತು ಆಪ್ ಅನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಡೌನ್‍ಲೋಡ್ ಮಾಡಿಕೊಳ್ಳಲು ಮನವಿ ಮಾಡಲಾಗುವುದು. ಎ.21ರಂದು ಮತ್ತೆ ಸಭೆ ಸೇರಿ, ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ಇದೇ ವೇಳೆ ವಿವರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News