ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ: ನಿರ್ಣಯ ಕೈಗೊಂಡವರಿಗೆ ನೋಟಿಸ್- ಸುರೇಶ್ ಕುಮಾರ್

Update: 2020-04-19 12:14 GMT

ಬೆಂಗಳೂರು, ಎ.19: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮವೆಂದು ನಿರ್ಣಯ ಕೈಗೊಂಡಿರುವ ಬಗ್ಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ರವಿವಾರ ಈ ಕುರಿತು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇ.ಸಿದ್ದಲಿಂಗಯ್ಯ ಹಿರೇಮಠ್ ಅಧ್ಯಕ್ಷತೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಭೆ ನಡೆದಿದೆ. ಇದರಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ನಡೆದ ಮಧ್ಯಂತರ ಪರೀಕ್ಷೆಯ ಆಧಾರದಲ್ಲಿ ಫಲಿತಾಂಶ ನೀಡುವುದು ಉತ್ತಮವೆಂದು ನಿರ್ಣಯ ಕೈಗೊಳ್ಳಲಾಗಿದೆ. ಇಂತಹ ನಿರ್ಣಯ ಕೈಗೊಳ್ಳುವುದಕ್ಕೆ ಅಪರ ಆಯುಕ್ತರಿಗೆ ಅಧಿಕಾರವಿಲ್ಲವೆಂದು ಸುರೇಶ್‍ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇಲಾಖೆಯ ಅಧಿಕಾರಿಗಳು ಸರಕಾರವು ಕಾಲಕಾಲಕ್ಕೆ ರೂಪಿಸುವ ನೀತಿ ಅನುಷ್ಠಾನದ ಜವಾಬ್ದಾರಿಯನ್ನು ಮಾತ್ರ ಹೊಂದಿರುತ್ತಾರೆ. ಈ ರೀತಿ ಸಭೆಗಳನ್ನು ನಡೆಸುವುದು, ನಿರ್ಣಯ ಕೈಗೊಳ್ಳುವುದಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಾಗಿ ಈ ಅಧಿಕಾರಿ ನೇತೃತ್ವದಲ್ಲಿ ನಡೆಸಿದ ಸಭಾ ನಿರ್ಣಯಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ಕೊಡಬೇಕಿಲ್ಲ. ಈ ನಿರ್ಣಯದ ಪ್ರತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಕರಣ ಕುರಿತು: ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಸಿದ್ಧಲಿಂಗಯ್ಯ ಎಸ್.ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಧಾರವಾಡ ವಿಭಾಗದಲ್ಲಿ 700ಕ್ಕಿಂತಲೂ ಹೆಚ್ಚು ಪರೀಕ್ಷಾ ಕೇಂದ್ರಗಳಿದ್ದು, 2.6 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಪರೀಕ್ಷೆ ಬರೆಯಬೇಕಾಗಿದೆ. ಈ ಎಲ್ಲ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ, ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟಕರವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ 350ರಿಂದ 400ರವರೆಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದು, ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವುದು ಸಾಧ್ಯವಾಗುವುದಿಲ್ಲ.

ಹೀಗಾಗಿ 2019-20ನೇ ಸಾಲಿನಲ್ಲಿ ನಡೆದ ವಿವಿಧ ಹಂತದ ಪರೀಕ್ಷೆಗಳ ಆಧಾರದ ಮೇಲೆ ಗ್ರೇಡಿಂಗ್ ಮೂಲಕ ಮಕ್ಕಳಿಗೆ ಫಲಿತಾಂಶ ನೀಡುವುದು ಉತ್ತಮ ಎಂಬ ಅಂಶದ ಬಗ್ಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಕೋರಲು ನಿರ್ಣಯ ಅಂಗೀಕರಿಸಲಾಗಿದೆ. ಈ ನಿರ್ಣಯದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News