ಮಹಿಳೆಯರ ವಿರುದ್ಧ ನಡೆದಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ವರದಿ ನೀಡಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
Update: 2020-04-21 23:14 IST
ಬೆಂಗಳೂರು, ಎ.21: ಲಾಕ್‍ಡೌನ್ ಜಾರಿಯಾದ ಮೇಲೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಷ್ಟು ಪ್ರಕರಣಗಳು ದಾಖಲಾಗಿವೆ. ಏನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ವಿವರಣೆ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.
ವಲಸೆ ಕಾರ್ಮಿಕರು, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರು ಹಾಗೂ ಮಕ್ಕಳ ಮೇಲೆ ಬೀರಿರುವ ಮಾನಸಿಕ ಒತ್ತಡ ನಿವಾರಣೆಗೆ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿತು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದವರು ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಎಲ್ಲ ರೀತಿಯ ಸಹಾಯ ಮಾಡಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.