ಪ್ರಚೋದನಕಾರಿ ಹೇಳಿಕೆ ನೀಡುವ ಬಿಜೆಪಿ ನಾಯಕರ ವಿರುದ್ಧ ಸಿಎಂ ಕ್ರಮ ಕೈಗೊಳ್ಳಲಿ: ಡಿ.ಕೆ.ಶಿವಕುಮಾರ್
ಬೆಂಗಳೂರು, ಎ.21: ಪಾದರಾಯನಪುರ ಘಟನೆಗೆ ಒಂದು ಸಮುದಾಯವನ್ನು ಹೊಣೆಯಾಗಿಸುವ ಮೂಲಕ ಸಮಾಜದ ಸಾಮರಸ್ಯವನ್ನು ಕದಡಲಾಗುತ್ತಿದೆ. ಕೆಲವು ವ್ಯಕ್ತಿಗಳ ಕೃತ್ಯವನ್ನು ಒಟ್ಟು ಸಮುದಾಯದ ಕೃತ್ಯ ಎನ್ನುವಂತೆ ಬಿಂಬಿಸುತ್ತಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯ ನಾಯಕರ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಆಯೋಜಿಸಿದ್ದ 10 ಸಾವಿರ ಬಡ ಕುಟುಂಬಗಳಿಗೆ ದಿನಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸರಕಾರ ಲಾಕ್‍ಡೌನ್ ಮುಂದುವರೆಸಿರುವುದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳ ನೆರವಿಗೆ ಮುಂದಾಗಬೇಕು. ಎಲ್ಲ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಮಡು ಅವರಿಗೆ ದಿನಬಳಕೆ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಅವರು ಹೇಳಿದರು.
ಕೊರೋನ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು, ಆಡಳಿತದಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವುದು ಸರಕಾರದ ಜವಾಬ್ದಾರಿ. ಅದರಂತೆ, ಸರಕಾರ ಕೆಲಸ ಮಾಡುತ್ತಿದ್ದು, ಆರೋಗ್ಯ ರಕ್ಷಣೆ, ಆರ್ಥಿಕ ಸುಧಾರಣೆಗಾಗಿ ಸರಕಾರ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.
ಸಾರ್ವಜನಿಕರಿಂದ ಹಲವು ಬೇಡಿಕೆಗಳು ಬಂದಿವೆ, ಸರಕಾರ ಎಲ್ಲವನ್ನೂ ಒಂದೇ ದೃಷ್ಟಿಕೋನದಲ್ಲಿ ನೋಡಬೇಕು. ಪ್ರತಿಪಕ್ಷವಾಗಿ ಸರಕಾರಕ್ಕೆ ಸಹಕಾರ ನೀಡುವ ಜೊತೆಗೆ ಅಗತ್ಯ ಸಲಹೆಗಳನ್ನೂ ನೀಡಿದ್ದೇವೆ. ಅವುಗಳನ್ನು ಪಾಲಿಸುವುದು ಬಿಡುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮುಖಂಡರಾದ ಅನ್ಸರ್ ಪಾಷ, ಗುರಪ್ಪ ನಾಯ್ಡು ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.