ಬೆಳಗಾವಿ: ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಜಿಲ್ಲಾಡಳಿತಕ್ಕೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಹಸ್ತಾಂತರ

Update: 2020-04-23 12:09 GMT

ಬೆಳಗಾವಿ, ಎ.23: ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗಳನ್ನು ಬೆಳಗಾವಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಗುರುವಾರ ಬೆಳಗಾವಿ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿ ಸಚಿವ ಜಗದೀಶ್ ಶೆಟ್ಟರ್ ಅವರು ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗಳಿಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು, ಕೊರೋನ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್‍ಗಳನ್ನು ಬಳಸಲಾಗುವುದು ಎಂದು ತಿಳಿಸಿದರು.

ಜೊತೆಗೆ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ, ಕೊರೋನ ಸೋಂಕು ಪರೀಕ್ಷಿಸುವ ಪ್ರಯೋಗಾಲಯಕ್ಕೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಚಾಲನೆ ನೀಡಿದರು.

ಬೆಳಗಾವಿಯ ನೆಹರೂ ನಗರದ ಕೆಎಲ್‍ಇ ಆಸ್ಪತ್ರೆ ಎದುರಿಗೆ ಇರುವ ಭಾರತ ಸರಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದೆ. ಸದ್ಯ ಈಗ ಪ್ರತಿದಿನ 90 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಪ್ರಯೋಗಾಲಯ ಹೊಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News