×
Ad

ಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹೇರಿದರೆ ಶಾಲೆಗಳ ವಿರುದ್ಧ ಕ್ರಮ: ಸಚಿವ ಸುರೇಶ್‍ ಕುಮಾರ್

Update: 2020-04-23 19:10 IST

ಬೆಂಗಳೂರು, ಎ.23: ಯಾವ ಪೋಷಕರು ತಮ್ಮ ಮಕ್ಕಳ ಬೋಧನಾ ಶುಲ್ಕವನ್ನು ಕಟ್ಟಲು ಆರ್ಥಿಕವಾಗಿ ಸಮರ್ಥರಿದ್ದಾರೋ, ಬಾಕಿ ಪಾವತಿಸಲು ಶಕ್ತರಿದ್ದಾರೋ ಹಾಗೂ ಸ್ವಯಂ ಪ್ರೇರಿತವಾಗಿ ಕೊಡಲು ಮುಂದಾಗುವವರಿಂದ ಮಾತ್ರ ಕಂತುಗಳ ರೂಪದಲ್ಲಿ ಶಿಕ್ಷಣ ಕಾಯ್ದೆಯ ಅವಕಾಶಗಳಡಿಯಲ್ಲಿ ಶುಲ್ಕ ವಸೂಲಾತಿಗೆ ಶಾಲೆಗಳಿಗೆ ಅವಕಾಶ ನೀಡುವಂತೆ ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯಾವ ಪೋಷಕರು ತಮ್ಮ ಮಕ್ಕಳ ಶುಲ್ಕವನ್ನು ಕಟ್ಟಲು ಅಸಹಾಯಕರೋ, ಸದ್ಯಕ್ಕೆ ತಮಗೆ ಸಾಧ್ಯವಿಲ್ಲವೆಂದು ನಿರಾಕರಿಸುತ್ತಾರೆಯೋ ಅಂತಹವರಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡಬಾರದು. ಒಂದು ವೇಳೆ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಪೋಷಕರು ನೀಡುವ ಹಣವನ್ನು ಈ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳಲು ಪ್ರಥಮ ಆದ್ಯತೆ ನೀಡಬೇಕು. ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕೆಂದು ಶಿಕ್ಷಣ ಸಚಿವರು ಪತ್ರಿಕಾ ಹೇಳಿಕೆಯ ಮೂಲಕ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News