ಸರಕಾರ ಕೆಡವಲು ಸಾವಿರ ಕೋಟಿ, ಕೊರೋನ ವಿರುದ್ಧದ ಹೋರಾಟಕ್ಕೆ ಕೇವಲ 200 ಕೋಟಿ ರೂ.

Update: 2020-04-24 18:25 GMT

ಬಾಗಲಕೋಟೆ, ಎ.24: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ, ಕೇಂದ್ರದಲ್ಲಿ ಆಡಳಿತದಲ್ಲಿರುವ ಎನ್‍ಡಿಎ ನೇತೃತ್ವದ ಸರಕಾರ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತದೆ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದರು. ಆದರೆ, ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ಕೇಂದ್ರದಿಂದ ಬರಬೇಕಾದ ಅನುದಾನ ಬರದ ಹಿನ್ನೆಲೆಯಲ್ಲಿ ಕೊರೋನ ವೈರಸ್ ಸೋಂಕು ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ತೀವ್ರ ಹಿನ್ನೆಡೆಯಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಕಿಡಿಕಾರಿದ್ದಾರೆ.

ಶುಕ್ರವಾರ ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತದಲ್ಲಿದ್ದ ಸಮ್ಮಿಶ್ರ ಸರಕಾರವನ್ನು ಕೆಡವಲು ಬಿಜೆಪಿಯವರು 1 ಸಾವಿರ ಕೋಟಿ ರೂ.ಖರ್ಚು ಮಾಡಿದ್ದರು. ಈಗ ಕೊರೋನ ವಿರುದ್ಧದ ಹೋರಾಟಕ್ಕೆ ಬರೀ 200 ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜ.30ರಂದು ದೇಶದ ಮೊದಲ ಕೋವಿಡ್-19 ಪ್ರಕರಣ ಕೇರಳದಲ್ಲಿ ಪತ್ತೆಯಾಗಿತ್ತು. ಫೆ.1ರಿಂದಲೇ ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿಯೇ ಕಟ್ಟುನಿಟ್ಟಾಗಿ ತಪಾಸಣೆ ಮಾಡಿ, ಕ್ವಾರಂಟೈನ್‍ಗೆ ಒಳಪಡಿಸಿದ್ದರೆ ಇಷ್ಟೊಂದು ಗಂಭೀರ ಸ್ವರೂಪ ಪಡೆಯುತ್ತಿರಲಿಲ್ಲ. ಕೇಂದ್ರ ಸರಕಾರ ಪರಿಸ್ಥಿತಿ ಕೈಮೀರಿ ಹೋದ ಬಳಿಕ ಲಾಕ್‍ಡೌನ್ ಆದೇಶ ಮಾಡಿದೆ ಎಂದು ದೂರಿದರು.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News