ಪಾದರಾಯನಪುರ ಗಲಾಟೆ ಪ್ರಕರಣ: 186 ಪೊಲೀಸರಿಗೆ ಹೋಂ ಕ್ವಾರಂಟೈನ್
ಬೆಂಗಳೂರು, ಎ.25: ಪಾದರಾಯನಪುರ ಗಲಾಟೆ ಪ್ರಕರಣ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಕೊರೋನ ಸೋಂಕು ಭೀತಿ ಎದುರಾಗಿದ್ದು, ಮುಂಜಾಗೃತಾ ಕ್ರಮವಾಗಿ 186 ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.
ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ಪಶ್ಚಿಮ, ಕೇಂದ್ರ, ಉತ್ತರ ವಿಭಾಗ ಹಾಗೂ ಸಿಸಿಬಿ ಸಿಬ್ಬಂದಿ ಸೇರಿ ಒಟ್ಟು 186 ಮಂದಿ ಪೊಲೀಸರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. 150ಕ್ಕೂ ಹೆಚ್ಚು ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಎಲ್ಲ 186 ಪೊಲೀಸರನ್ನು ಹೋಂ ಕ್ವಾರಂಟೈನ್‍ಗೆ ಶಿಫ್ಟ್ ಮಾಡಲಾಗಿದೆ. ಅವಶ್ಯಕತೆ ಇದ್ದಲ್ಲಿ ಕೆಲ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರಿಗೂ ಕೋವಿಡ್-19 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದ ದಿನದಂದು 83 ಆರೋಪಿಗಳನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ 2 ಗಂಟೆಗಳ ಕಾಲ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಆಡುಗೋಡಿಯ ಮಂಗಳ ಕಲ್ಯಾಣ ಮಂಟಪದಲ್ಲಿ ಆರೋಪಿಗಳನ್ನು ಇರಿಸಲಾಗಿತ್ತು ಎಂದು ತಿಳಿದುಬಂದಿದೆ.