ರಾಜ್ಯದಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಿದೆ: ಸಚಿವ ಪ್ರಭು ಚೌಹಾಣ್

Update: 2020-04-25 18:01 GMT

ಬೆಂಗಳೂರು, ಎ. 25: ರಾಜ್ಯದಲ್ಲಿರುವ ಒಟ್ಟು 4,212 ಪಶು ವೈದ್ಯ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಜಾನುವಾರುಗಳಿಗೆ ಅಗತ್ಯವಿರುವಷ್ಟು ಮೇವು ಲಭ್ಯವಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ ಕರ್ತವ್ಯ ಲೋಪ ಕಂಡುಬಂದರೆ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಅವರು, ರಾಜ್ಯದಲ್ಲಿ ಸುಮಾರು 9 ಸಾವಿರಕ್ಕೂ ಅಧಿಕ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರತೆ ಇರುವ ಜಿಲ್ಲೆಗಳಲ್ಲಿ ಮೇವು ಒದಗಿಸಲು ಇಲಾಖೆಯಿಂದ ಕ್ಯಾಟಲ್ ಕ್ಯಾಂಪ್ ತೆರೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 1.4 ಕೋಟಿ ಮೇವು ಅವಲಂಬಿತ ಜಾನುವಾರುಗಳಿವೆ. 14.78 ಲಕ್ಷ ಟನ್‍ನಷ್ಟು ಮೇವು ಲಭ್ಯವಿದೆ. ಇದರ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿದ್ದಿರುವ ಹಿನ್ನೆಲೆಯಲ್ಲಿ ಹಸಿ ಮೇವು ಲಭ್ಯವಿದ್ದು, ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಸಮಸ್ಯೆ ಇಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೇವು ಹಾಗೂ ಪಶು ಚಿಕಿತ್ಸೆಗೆ ಸಂಬಂಧಿಸಿದಂತೆ ಕೊರತೆ ಎದುರಾದರೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಲು ಸೂಚಿಸಲಾಗಿದೆ. ಅಲ್ಲದೆ, ಕೊರೋನ ವೈರಸ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತಗಳ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಿಯಮ ಉಲ್ಲಂಘನೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News